ಮಡಿಕೇರಿ ಜೂ.1 NEWS DESK : ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ವಾಹನ ಮಾಲೀಕರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ, ವಾಹನ ಪರವಾನಿಗೆ ಹೊಂದಿಲ್ಲದವರಿಗೆ ವಾಹನ ಚಲಾಯಿಸಲು ಆಸ್ಪದ ನೀಡಬಾರದು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಂಡುಬಂದಲ್ಲಿ ವಾಹನ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುವುದು, ಬೈಕ್, ಕಾರುಗಳನ್ನು ಚಲಾಯಿಸುವಾಗ ಯಾವುದೇ ರೀತಿಯ ಸ್ಟಂಟ್ಗಳನ್ನು ಮಾಡಿರುವ ಭಾವಚಿತ್ರ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಗ್ಗೆ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮತ್ತು ಕೆ.ಎಸ್.ಪಿ ತಂತ್ರಾಶದ ಮೂಲಕವೂ ಮಾಹಿತಿ ನೀಡಬಹುದು. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.










