ಕುಶಾಲನಗರ, ಜೂ.4 NEWS DESK : ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ., ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ( ಎನ್.ಎಸ್.ಎಸ್.) ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಘಟಕದ ವತಿಯಿಂದ
“ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ”ಎಂಬ ಕೇಂದ್ರ ವಿಷಯದಡಿ ‘ವಿಶ್ವ ಪರಿಸರ ದಿನಾಚರಣೆ:2024 ರ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ “ಪರಿಸರ ಸಂಭ್ರಮ”: “ನಮ್ಮನಡೆ ಪರಿಸರದೆಡೆಗೆ” “ಗೋ ಗ್ರೀನ್ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ನಾವು ಅರಣ್ಯ ಸಂರಕ್ಷಣೆಗಾಗಿ ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದರು.
ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದು ಪ್ರೇಮಕುಮಾರ್ ಹೇಳಿದರು.
ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ತಿಳಿಸಿದರು. ನಾವು ಪಶ್ಚಿಮಘಟ್ಟದಲ್ಲಿನ ಜೀವ ವೈವಿಧ್ಯ, ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಸುಂದರ ಪ್ರಕೃತಿ ತಾಣವಾದ ಕೊಡಗಿನ ಅರಣ್ಯ, ಪರಿಸರ, ಜೀವ ವೈವಿಧ್ಯ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು. ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು. ತಮ್ಮ ಶಾಲಾ ಅಂಗಳ ಮತ್ತು ಸುತ್ತಲಿನ ಪರಿಸರದಲ್ಲಿ ವರ್ಷದಲ್ಲಿ ಕನಿಷ್ಠ ಎರಡು ಗಿಡಗಳನ್ನು ನೆಟ್ಟು ಅದನ್ನು ನಿರ್ವಹಣೆ ಮಾಡಿ ಪೋಷಿಸುವ ಗುರುತರ ಜವಾಬ್ದಾರಿ ಹೊಂದಬೇಕು ಎಂದು ಕರೆ ನೀಡಿದರು.
ಹಸಿರು ಅಭಿಯಾನಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿದ ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ. ತಮ್ಮನ್ನು ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.
ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಜೀವನದ ಅಸ್ತಿತ್ವದಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರಿಸರವನ್ನು ಉಳಿಸುವುದು ಮತ್ತು ರಕ್ಷಿಸುವುದು ಮುಖ್ಯವಾಗಿದೆ ಎಂದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ ಇದ್ದರು.
::: ಪ್ರತಿಜ್ಞೆ ಸ್ವೀಕಾರ :::
ಇದಕ್ಕೂ ಮುನ್ನ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ , ಎನ್.ಎಸ್.ಎಸ್.ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ಸಹಯೋಗದಲ್ಲಿ ಪರಿಸರ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು.
ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತ ಭಿತ್ತಿಫಲಕಗಳನ್ನು ಹಿಡಿದು ಗಿಡನೆಟ್ಟು ಬೆಳೆಸಿ ಪರಿಸರ ಸಂರಕ್ಷಿಸಿ, ಪ್ಲಾಸ್ಟಿಕ್ ಬಳಕೆ ತ್ಯಜಿಸಿ ಮಾಲಿನ್ಯ ತಡೆಯಿರಿ, ಹಸಿರೇ ಉಸಿರು- ಜಲವೇ ಜೀವಜಾಲ ಎಂಬಿತ್ಯಾದಿ ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸಿದರು.
.