ಮಡಿಕೇರಿ ಜೂ.5 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಅವರು ಜಯಭೇರಿ ಬಾರಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವಾಗಿದ್ದು, ಜಾತ್ಯತೀತ ಜನತಾದಳದ ಬಲ ಮತ್ತಷ್ಟು ಹೆಚ್ಚಾಗಿದೆ ಎಂದು ಕೊಡಗು ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೂಟೆರ ಪುಷ್ಪಾವತಿ ರಮೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ಎನ್‍ಡಿಎ ಮೈತ್ರಿ ಕೂಟ ಬಹುಮತ ಪಡೆದುಕೊಂಡಿದೆ. ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಫಲವಾಗಿ 19 ಸ್ಥಾನಗಳು ಲಭಿಸಿದೆ. ಮೈಸೂರು- ಕೊಡಗು ಕ್ಷೇತ್ರ ನಿರೀಕ್ಷೆಯಂತೆ ಮೈತ್ರಿ ಅಭ್ಯರ್ಥಿಯ ಪಾಲಾಗಿದೆ. ಇದು ಜೆಡಿಎಸ್ ಗೆ ಇರುವ ಜನಬೆಂಬಲಕ್ಕೆ ಸಾಕ್ಷಿಯಾಗಿದೆ. ಯದುವೀರ್ ಅವರಿಗೆ ಕೊಡಗು ಜೆಡಿಎಸ್ ಅಭಿನಂದನೆ ಸಲ್ಲಿಸುತ್ತದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಲ್ಲಿ 2,84,620 ಬೃಹತ್ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೋಲಾರ ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಗೆಲುವಿನ ನಗು ಬೀರಿದ್ದಾರೆ. ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡ ಬಿಜೆಪಿ 17 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ರಾಜ್ಯದ ಜನ ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸಿದ್ದಾರೆ ಮತ್ತು ಬೆಂಬಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್ ಅವರು ದಾಖಲೆ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಬೆಂಬಲದಿಂದ 73,859 ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಜೆಡಿಎಸ್ ಗೆ ಹೊಸ ಸ್ಫೂರ್ತಿಯನ್ನು ತುಂಬಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಇಳಿವಯಸ್ಸಿನಲ್ಲೂ ರಾಜ್ಯವ್ಯಾಪಿ ಸಂಚರಿಸಿ ಪ್ರಚಾರದಲ್ಲಿ ಪಾಲ್ಗೊಂಡು ಪಕ್ಷದ ಬಲವನ್ನು ಹೆಚ್ಚಿಸಿದ್ದಾರೆ. ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗಳಲ್ಲಿ ಜೆಡಿಎಸ್ ಶಕ್ತಿ ಮತ್ತೆ ಸಾಬೀತಾಗಲಿದೆ ಎಂದು ಪುಷ್ಪಾವತಿ ರಮೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.