ಮಡಿಕೇರಿ ಜೂ.5 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಕೂಟದ ಅಭ್ಯರ್ಥಿಗೆ ಸೋಲಾಗಿದೆ, ಜನರು ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ ಎಂದು ಇಂಡಿಯಾ ಮಿತ್ರ ಪಕ್ಷ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಜನಸಾಮಾನ್ಯರ ಆಶಯಗಳಿಗೆ ವಿರುದ್ಧವಾಗಿದ್ದ ಎನ್‍ಡಿಎ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ “ಬೈ ಬೈ ಮೋದಿ” ಅಭಿಯಾನವನ್ನು ಆಮ್ ಆದ್ಮಿ ಪಾರ್ಟಿ ಹಮ್ಮಿಕೊಂಡಿತ್ತು. ಆದರೆ ಮತದಾರರು ಮತ್ತೆ ಮೋದಿ ಹಾಗೂ ಎನ್‍ಡಿಎ ಅಭ್ಯರ್ಥಿಗೆ ಬಹುಮತ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಈ ತೀರ್ಪನ್ನು ಪಕ್ಷ ಸ್ವಾಗತಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಜಿ.ಪಂ ಮತ್ತು ತಾ.ಪಂ ಚುನಾವಣೆ ವೇಳೆಗೆ ಆಮ್ ಆದ್ಮಿ ಪಾರ್ಟಿಯನ್ನು ಬಲಿಷ್ಠವಾಗಿ ಸಂಘಟಿಸಲಾಗುವುದು ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.