ಮಡಿಕೇರಿ ಜೂ.7 NEWS DESK : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಕಳೆದ ಏಳು ದಿನಗಳಿಂದ ನಡೆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ(ಎನ್‍ಎಸ್‍ಎಸ್)ದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ.ಪಂಕಜಾಕ್ಷನ್, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಜೀವನದ ಸಾರವನ್ನು ತಿಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿ ಎಲ್ಲರೂ ಒಂದೇ, ನಾನು ನೀನು ಎನ್ನುವ ಭೇದಭಾವಕ್ಕೆ ಅವಕಾಶವಿಲ್ಲ. ಪರಸ್ಪರ ಸಹಕಾರಿ ಮನೋಭಾವ ರೂಪಿಸಿಕೊಳ್ಳಲು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಗಾಳಿಬೀಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಿರಣ್ ಮಾತನಾಡಿ, ನಮ್ಮ ಗ್ರಾಮದಲ್ಲಿ ಹೀಗೊಂದು ಶಿಬಿರ ನಡೆಯುತ್ತಿರುವುದು ನಮಗೆ ಹೆಮ್ಮೆಯ ವಿಚಾರ. ರಾ.ಸೇ.ಯೋಜನೆಯ ವಿಚಾರಧಾರೆಗಳು ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಅಗತ್ಯ. ವಿದ್ಯಾರ್ಥಿ ದಿಸೆಯಲ್ಲೇ ಎನ್.ಎಸ್.ಎಸ್ ವಿಚಾರಗಳು ಮನದಲ್ಲಿ ಬೇರೂರಿದರೆ, ಮಾನಸಿಕ ದೃಢತೆಗೆ ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೋ. ಬಿ.ರಾಘವ, ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಗ್ರಾಮ ಜೀವನ, ಹೊಂದಾಣಿಕೆಯ ಜೀವನ ಹಾಗೂ ಸರಳತೆಯ ಮಹತ್ವವನ್ನು ತಿಳಿಸುತ್ತದೆ. ವಿದ್ಯಾರ್ಥಿಗಳು ರಾ.ಸೇ.ಯೋಜನೆಯಲ್ಲಿ ಕಳೆಯುವ ದಿನಗಳು ಬಹಳ ಪ್ರಮುಖವಾದುದ್ದು, ನನಗಲ್ಲ ನಿನಗೆ ಎನ್ನುವ ಧ್ಯೇಯದೊಡನೆ ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವನ್ನು ಹುಟ್ಟು ಹಾಕುತ್ತದೆ. ವಿದ್ಯಾರ್ಥಿಗಳು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.
ಏಳು ದಿನಗಳ ಶಿಬಿರದಲ್ಲಿ ಭಾಗವಹಿಸಿದ ಸ್ವಯಂಸೇವಕರಲ್ಲಿ ದ್ವಿತೀಯ ವರ್ಷದ ದೀಕ್ಷಿತ್ ಹಾಗೂ ಲಕ್ಷ್ಮಿ, ಪ್ರಥಮ ವರ್ಷದ ಮಧುಸೂಧನ್ ಹಾಗೂ ಲಿಖಿತಾ ಅವರಿಗೆ ಅತ್ಯುತ್ತಮ ಶಿಬಿರಾರ್ಥಿ ಎಂಬ ಫಲಕವನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜವಾಹರ್ ನವೋದಯ ವಿದ್ಯಾಲಯದ ಉಪ ಪ್ರಾಂಶುಪಾಲೆ ಶೋಭಾಮಣಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕ ತಳವಾರ್, ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಡಾ.ಗಾಯತ್ರಿ, ಡಾ.ಮಹದೇವಯ್ಯ, ಶಿಬಿರಾಧಿಕಾರಿಗಳಾದ ಅಲೋಕ್ ಬಿ.ಜೈ, ಖುರ್ಷಿದಾ ಭಾನು, ಸ್ಥಳೀಯರಾದ ಕೋಚನ ಡಿಶಾಂತ್ ಹಾಜರಿದ್ದರು.