ಮಡಿಕೇರಿ ಜೂ.8 NEWS DESK : ಬೆಳ್ತಂಗಡಿ ತಾಲ್ಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್‍ಟಿ ಯುವ ಮೋರ್ಚಾದ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಅವರ ಮೇಲೆ ನಡೆದಿರುವ ಹಲ್ಲೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ರಾಜೇಶ್ ಮೇಲೆ ಮರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಹಲ್ಲೆಗಳು ನಡೆಯುತ್ತಿದ್ದು, ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ ಎಂದು ಆರೋಪಿಸಿದ್ದಾರೆ.
ರಾಜೇಶ್ ಮೇಲೆ ಹಲ್ಲೆ ಮಾಡಿದ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
::: ಸರಕಾರವೇ ವಜಾಗೊಳ್ಳಲಿ :::
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಕೋಟ್ಯಾಂತರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧೀಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿರೋಧ ಪಕ್ಷದ ಒತ್ತಡದಿಂದ ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವರು ರಾಜೀನಾಮೆ ಸಲ್ಲಿಸಿದರೆ ಸಾಲದು, ಪರಿಶಿಷ್ಟರನ್ನು ವಂಚನೆ ಮಾಡಿದ ದೊಡ್ಡ ಅನ್ಯಾಯದ ಹಗರಣ ಇದಾಗಿರುವುದರಿಂದ ಸರಕಾರವೇ ವಜಾಗೊಳ್ಳಬೇಕು ಎಂದು ಎಂ.ಎಂ.ಪರಮೇಶ್ವರ ಆಗ್ರಹಿಸಿದ್ದಾರೆ.
ದಲಿತರನ್ನು ಉದ್ಧಾರ ಮಾಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಇದೀಗ ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟರ ಅನುದಾನವನ್ನು ಬಳಕೆ ಮಾಡಿ ಅನ್ಯಾಯವೆಸಗಿದೆ ಎಂದು ಟೀಕಿಸಿರುವ ಅವರು, ಕಾಂಗ್ರೆಸ್ ಅಧಿಕಾರ ನಡೆಸುವ ನೈತಿಕತೆಯನ್ನು ಕಳೆದಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ಪರಿಶಿಷ್ಟರ ಅಭಿವೃದ್ಧಿಗಾಗಿ ಎಷ್ಟು ಹಣ ವಿನಿಯೋಗಿಸಲಾಗಿದೆ ಎನ್ನುವ ಬಗ್ಗೆ ಸರಕಾರ ಶ್ವೇತಪತ್ರ ಬಿಡುಗಡೆ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.