ಮಡಿಕೇರಿ ಜೂ.8 NEWS DESK : ಸಿದ್ದಾಪುರದ ಕಾಫಿ ತೋಟದ ಬೃಹತ್ ಭೂಪರಿವರ್ತನೆ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಭೂಪರಿವರ್ತನೆಗಳ ವಿರುದ್ಧ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜೂ.10 ರಂದು ಬಾಳೆಲೆಯಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಬಾಳೆಲೆ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಪರಿವರ್ತನೆ ವಿರುದ್ಧ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕಾಫಿ ತೋಟಗಳ ಭೂಪರಿವರ್ತನೆಯಿಂದ ಕೊಡಗಿನ ಎಲ್ಲಾ ಗ್ರಾಮಗಳು ನಾಶವಾಗುತ್ತಿವೆ. ಮಣ್ಣು ಅಗೆಯುವ ಕೆಲಸದಿಂದ ಬಹುವಾರ್ಷಿಕ ಜಲಮೂಲಗಳ ನರ ಕೇಂದ್ರಗಳು ಈಗಾಗಲೇ ಮುಚ್ಚಿವೆ. ಈ ಬಗ್ಗೆ ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಇದರೊಂದಿಗೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಎಸ್.ಟಿ ಟ್ಯಾಗ್, ಕೊಡವರ ಆಂತರಿಕ ರಾಜಕೀಯ ಸ್ವಯಂ ನಿರ್ಣಯದ ಹಕ್ಕುಗಳನ್ನು ಮಾನ್ಯ ಮಾಡಬೇಕು ಸೇರಿದಂತೆ ಇಡೀ ಕೊಡವ ಜನಾಂಗದ ಪರವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ಹೇಳಿದ್ದಾರೆ.
ಆದಿಮಸಂಜಾತ ಕೊಡವರ ಹಕ್ಕುಗಳನ್ನು ಉಳಿಸಿಕೊಳ್ಳಲು, ರಕ್ಷಿಸಲು, ನಮ್ಮ ಅನುವಂಶಿಕ ಭೂಮಿಯನ್ನು ಉಳಿಸಿಕೊಳ್ಳಲು, ಮಾತೃ ಭೂಮಿ, ಶಾಶ್ವತವಾದ ದೀರ್ಘಕಾಲಿಕ ಜಲಸಂಪನ್ಮೂಲಗಳು, ನಯನ ಮನೋಹರ ಪರಿಸರ, ಭೂಗೋಳವನ್ನು ನೈಸರ್ಗಿಕವಾಗಿ ವಿಹಂಗಮ ಪರ್ವತಗಳು, ಬೆಟ್ಟಗಳು, ನಿತ್ಯಹರಿಧ್ವರ್ಣದ ಸಸ್ಯ ಮತ್ತು ಪ್ರಾಣಿ ಸಂಕುಲಗಳು ಜೈವಿಕ ವೈವಿಧ್ಯತೆ, ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಜಾನಪದ ಪರಂಪರೆ ಮತ್ತು ಭೂಮಿಯೊಂದಿಗೆ ಬೆಸೆದುಕೊಂಡಿರುವ ಕೊಡವರ ಯೋಧರ ಪರಂಪರೆ ಮತ್ತು ಈ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಗಾಗಿ ಸ್ವಯಂ-ಆಡಳಿತವನ್ನು ಸಂವಿಧಾನದ ವಿಧಿ 244, 371 ಆರ್/ಡಬ್ಲ್ಯೂ 6 ಮತ್ತು 8ನೇ ಶೆಡ್ಯೂಲ್ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳು ವಿಶ್ವ ರಾಷ್ಟ್ರಸಂಸ್ಥೆ ಹೊರಡಿಸಿರುವ ಆದಿಮಸಂಜಾತ ಜನಾಂಗದ ಹಕ್ಕುಗಳ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಕೊಡವರನ್ನು ರಕ್ಷಿಸಬೇಕಾದ ಅನಿವಾರ್ಯತೆ ಇದೆ ಎಂದು ನಾಚಪ್ಪ ಪ್ರತಿಪಾದಿಸಿದ್ದಾರೆ.
ಮುಂದಿನ ದಿನಗಳಲ್ಲಿ ಮಡಿಕೇರಿ, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಚೇರಂಬಾಣೆ, ಮೂರ್ನಾಡು, ಕಕ್ಕಬೆ, ನಾಪೋಕ್ಲು, ವಿರಾಜಪೇಟೆ, ಸಿದ್ದಾಪುರ, ಗೋಣಿಕೊಪ್ಪ, ತಿತಿಮತಿ, ಬಾಳೆಲೆ, ಪೊನ್ನಂಪೇಟೆ, ಹುದಿಕೇರಿ, ಕುಟ್ಟ, ಶ್ರೀಮಂಗಲ, ಟಿ.ಶೆಟ್ಟಿಗೇರಿ ಮತ್ತಿತರೆಡೆ ಕೂಡ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.