ಮಡಿಕೇರಿ ಜೂ.14 NEWS DESK : ಅನುದಾನದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದಿಂದಲೇ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿರುವುದರಿಂದ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆ ಕೆಪಿಸಿಸಿ ವಕ್ತಾರ ಹಾಗೂ ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗಿಲ್ಲ ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ವರನ್ನೂ ಒಗ್ಗೂಡಿಸಿಕೊಂಡು ಸರ್ವರ ವಿಕಾಸಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುತ್ತಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರಕ್ಕೆ ಲಕ್ಷ್ಮಣ್ ಅವರು ಪಾಠ ಮಾಡುವ ಅಗತ್ಯವಿಲ್ಲ. ಕಾಂಗ್ರೆಸ್ ಸರಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅವರು ಮೊದಲು ಧ್ವನಿ ಎತ್ತಲಿ ಎಂದು ಒತ್ತಾಯಿಸಿದ್ದಾರೆ.
ಕಳೆದ ಹತ್ತು ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಹಿಂದುಳಿದ ವರ್ಗ, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ಏಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಿದೆ. ಆದರೆ ಹಲವು ದಶಕಗಳ ಕಾಲ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಈ ಮೂರು ವರ್ಗವನ್ನು ಕೇವಲ ಮತಬ್ಯಾಂಕ್ ಗಾಗಿ ಮಾತ್ರ ಬಳಸಿಕೊಂಡಿತ್ತು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಬೇಕಾದರೆ ವಿ.ಪಿ.ಸಿಂಗ್ ಅವರ ಸರಕಾರದವರೆಗೆ ಕಾಯಬೇಕಾಯಿತು. ಅಲ್ಲಿಯವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ಸಾಧ್ಯವಾಗಿರಲಿಲ್ಲ. ಇದನ್ನು ಲಕ್ಷ್ಮಣ್ ಅವರು ಅಧ್ಯಯನ ಮಾಡಿ ಮನವರಿಕೆ ಮಾಡಿಕೊಂಡರೆ ಒಳಿತು ಎಂದು ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಮತ್ತೆ ಪರಿಶಿಷ್ಟರಿಗೆ ಅನ್ಯಾಯ ಮಾಡುತ್ತಿದೆ. ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಬಲ್ಲ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವ ಸರಕಾರ ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿಟ್ಟ ಕೋಟ್ಯಾಂತರ ರೂಪಾಯಿ ಅನುದಾನವನ್ನು ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳುತ್ತಿದೆ. ಇದು ಪರಿಶಿಷ್ಟರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯವಾಗಿದೆ ಎಂದು ಪರಮೇಶ್ವರ ಆರೋಪಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದು ಅಧಿಕಾರಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಪರಿಶಿಷ್ಟರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಸಾಕ್ಷೀಕರಿಸಿದೆ. ಆದರೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯೇ ಇಲ್ಲದ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿರುವ ಲಕ್ಷ್ಮಣ್ ಅವರು, ಸೋಲಿನ ಹತಾಶೆಯಿಂದ ಎನ್‍ಡಿಎ ಸರಕಾರದ ವಿರುದ್ಧವೇ ಟೀಕೆಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ಪ್ರತಿಷ್ಠೆಯ ಕಣದಲ್ಲೇ ಲಕ್ಷ್ಮಣ್ ಅವರನ್ನು ಜನ ತಿರಸ್ಕರಿಸಿದ್ದಾರೆ.
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ಬದಿಗೊತ್ತಿ ಸಾಮಾಜಿಕ ನ್ಯಾಯವನ್ನು ಒದಗಿಸುತ್ತಿರುವ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಇನ್ನಾದರೂ ಲಕ್ಷ್ಮಣ್ ಅವರು ಬಿಜೆಪಿಯನ್ನು ಟೀಕಿಸುವುದನ್ನು ಬಿಟ್ಟು ತಮ್ಮ ಸೋಲಿನ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಲಿ. ಗ್ಯಾರಂಟಿ ಯೋಜನೆಗಳಿಗೆ ಜನ ಮರುಳಾಗುವುದಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಲಿ ಮತ್ತು ಪರಿಶಿಷ್ಟರಿಗಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿಡಲಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಆದಿವಾಸಿಗಳು ಪ್ಲಾಸ್ಟಿಕ್ ಶೀಟ್ ಗಳ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಲಕ್ಷ್ಮಣ್ ಅವರು ಮೊದಲು ಗಿರಿಜನ ಹಾಡಿಗಳಿಗೆ ಭೇಟಿ ನೀಡಿ ಸರಕಾರದ ಮೂಲಕ ಸಾಮಾಜಿಕ ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದ್ದಾರೆ.
ಕೇಂದ್ರದ ಎನ್‍ಡಿಎ ಸರಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ನೀಡಿರುವ ಹೇಳಿಕೆ ಖಂಡನೀಯ. ರಾಜ್ಯ ಸರಕಾರದಿಂದ ಪರಿಶಿಷ್ಟರಿಗೆ ಅನ್ಯಾಯವಾಗುತ್ತಿದ್ದರೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ದಿವಾಕರ್ ಅವರ ಹೇಳಿಕೆ ಹಿಂದೆ ದುರುದ್ದೇಶ ಅಡಗಿದೆ. ಪರಿಶಿಷ್ಟರ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಅವರು ಯಾಕೆ ಪ್ರಶ್ನೆ ಮಾಡುತ್ತಿಲ್ಲ.
ಜಿಲ್ಲೆಯಲ್ಲಿ ಆದಿವಾಸಿಗಳು ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದರೂ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯವನ್ನು ಯಾಕೆ ಖಂಡಿಸುತ್ತಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಪರಿಶಿಷ್ಟರ ಅಭಿವೃದ್ಧಿಗೆ ಸರಕಾರ ಇಲ್ಲಿಯವರೆಗೆ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ದಿವಾಕರ್ ಅವರು ಯಾಕೆ ಪ್ರಶ್ನೆ ಮಾಡುತ್ತಿಲ್ಲವೆಂದು ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.