ಮಡಿಕೇರಿ ಜೂ.15 NEWS DESK : ಸಿದ್ದಾಪುರದ ಕಾಫಿ ತೋಟ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿರುವ ಬೃಹತ್ ಭೂಪರಿವರ್ತನೆಯನ್ನು ವಿರೋಧಿಸಿ ಜೂ.17ರಂದು ಸಿದ್ದಾಪುರದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಶಾಂತಿಯುತ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಸಿದ್ದಾಪುರ ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಭೂಪರಿವರ್ತನೆ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.
ಬೃಹತ್ ಭೂಪರಿವರ್ತನೆಯಿಂದ ಕೊಡಗಿನಲ್ಲಿ ಜನಸಂಖ್ಯಾ ಸ್ಫೋಟ ಸಂಭವಿಸಿ ಆದಿಮಸಂಜಾತ ಬುಡಕಟ್ಟು ಜನಾಂಗ ಮೂಲನಿವಾಸಿ ಕೊಡವರ ಅಸ್ತಿತ್ವಕ್ಕೆ ದಕ್ಕೆ ಬರಬಹುದು. ಕಾಫಿ ತೋಟವನ್ನು ಪರಿವರ್ತಿಸುವ ಮೂಲಕ ದೈತ್ಯಾಕಾರದ ವಿಲ್ಲಾಗಳು, ಮೆಗಾ ಟೌನ್‍ಶಿಪ್‍ಗಳು ಮತ್ತು ಮನೆ ನಿವೇಶನಗಳನ್ನು ನಿರ್ಮಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಯುನೆಸ್ಕೋದ ವಿಶ್ವ ಪರಂಪರೆಯ ತಾಣದಡಿಯಲ್ಲಿ ಬರುವ ತಡಿಯಂಡಮೋಲ್‍ನ ಕೆಳಗೆ ಕಾಫಿ ತೋಟಗಳು ಪರಿವರ್ತನೆಯಾಗಿದೆ. ಮಕ್ಕಂದೂರಿನ ಪಶ್ಚಿಮಘಟ್ಟಗಳ ವಲಯದಲ್ಲಿ ರೆಸಾರ್ಟ್ ಅನ್ನು ನಿರ್ಮಿಸಲಾಗಿದೆ. ಗಾಳಿಬೀಡಿನ ಹಸಿರು ಬೆಲ್ಟ್ ಪ್ರದೇಶದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಹೈದರಾಬಾದ್ ನವರು ಹೌಸಿಂಗ್ ಕಾಲೋನಿಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಅರೆಕಾಡ್‍ನಲ್ಲಿ ಟೌನ್‍ಶಿಪ್‍ಗಳು ತಲೆ ಎತ್ತುತ್ತಿವೆ.
ಕುಟ್ಟ-ಶ್ರೀಮಂಗಲದಲ್ಲಿ ಉದ್ದೇಶಿತ ಪಟ್ಟಣಗಳು ಮತ್ತು ಆರ್ಥಿಕ ಕಾರಿಡಾರ್‍ಗಳಿಗಾಗಿ ಭೂಮಿಯನ್ನು ಜೂಜಾಟದ ರೀತಿಯಲ್ಲಿ ಖರೀದಿಸಲಾಗುತ್ತಿದೆ. ಬೆಂಗಳೂರು, ತಿರುವನಂತಪುರ, ಚೆನ್ನೈ, ಹೈದರಬಾದ್ ಸೇರಿದಂತೆ ದೇಶದ ವಿವಿಧೆಡೆಯ ಭೂಮಾಫಿಯ ಹಾಗೂ ರಾಜಕೀಯ ಸಂಯೋಜಿತ ಗುಂಪುಗಳು ಈ ಕಾರ್ಯದಲ್ಲಿ ತೊಡಗಿವೆ ಎಂದು ನಾಚಪ್ಪ ಆರೋಪಿಸಿದ್ದಾರೆ.
ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವೆಂದು ಪ್ರತಿಪಾದಿಸಿದ್ದಾರೆ.
ನಮ್ಮ ಅನುವಂಶಿಕ ಭೂಮಿಯನ್ನು ಉಳಿಸಿಕೊಳ್ಳಲು, ಮಾತೃಭೂಮಿ, ಶಾಶ್ವತವಾದ ದೀರ್ಘಕಾಲಿಕ ಜಲಸಂಪನ್ಮೂಲಗಳು, ನಯನ ಮನೋಹರ ಪರಿಸರ, ಭೂಗೋಳವನ್ನು ನೈಸರ್ಗಿಕವಾಗಿ ವಿಹಂಗಮ ಪರ್ವತಗಳು, ಬೆಟ್ಟಗಳು, ನಿತ್ಯಹರಿದ್ವರ್ಣದ ಸಸ್ಯ ಮತ್ತು ಪ್ರಾಣಿ ಸಂಕುಲಗಳು ಜೈವಿಕ ವೈವಿಧ್ಯತೆ, ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಜಾನಪದ ಪರಂಪರೆ ಮತ್ತು ಭೂಮಿಯೊಂದಿಗೆ ಬೆಸೆದುಕೊಂಡಿರುವ ಕೊಡವರ ಯೋಧರ ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ. ಈ ಮಣ್ಣಿನಲ್ಲಿ ನಮ್ಮ ಐತಿಹಾಸಿಕ ನಿರಂತರತೆಗಾಗಿ ಸ್ವಯಂ-ಆಡಳಿತವನ್ನು ಸಂವಿಧಾನದ ವಿಧಿ 244, 371 ಆರ್/ಡಬ್ಲ್ಯೂ 6 ಮತ್ತು 8ನೇ ಶೆಡ್ಯೂಲ್ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕುಗಳು ವಿಶ್ವ ರಾಷ್ಟ್ರ ಸಂಸ್ಥೆ ಹೊರಡಿಸಿರುವ ಆದಿಮಸಂಜಾತ ಜನಾಂಗದ ಹಕ್ಕುಗಳ ಅಂತರಾಷ್ಟ್ರೀಯ ಕಾನೂನಿನಂತೆ ಜಾರಿಯಾಗುವ ಅಗತ್ಯವಿದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಆಸ್ತಿಯಾದ “ಕೊಡವ ಲ್ಯಾಂಡ್” ನ್ನು ಉಳಿಸಿಕೊಳ್ಳಲು ಎಲ್ಲಾ ಕೊಡವರು ಒಗ್ಗಟ್ಟಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.