ಮಡಿಕೇರಿ ಜೂ.15 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರು ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸಂಸದರಾಗಿ ಗೆಲುವು ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ ಯದುವೀರ್ ಅವರಿಗೆ ಗಡಿಭಾಗ ಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಂತರ ಸಂಸದರು ತಲಕಾವೇರಿ, ಭಾಗಮಂಡಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ನಾಪೋಕ್ಲುವಿಗೆ ತೆರಳಿದ ಅವರು ಶ್ರೀಭಗವತಿ ದೇವಾಲಯದಲ್ಲಿ ಸೂಜೆ ಸಲ್ಲಿಸಿ, ದೇವಾಲಯದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅವರು ಜಿಲ್ಲೆಯ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಪಾಡಿ ಶ್ರೀಇಗ್ಗುತ್ತಪ್ಪ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ಅವರು ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು.
ಕುಶಾಲನಗರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಕಾವೇರಿ ನದಿಯ ಸಂರಕ್ಷಣೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡಲು ಬದ್ಧನಾಗಿರುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಹಿಳಾ ಮೋರ್ಚಾದ ಅಧ್ಯಕ್ಷೆ ಅನಿತಾ ಪೂವಯ್ಯ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮತ್ತಿತರ ಪ್ರಮುಖರು ಹಾಜರಿದ್ದರು.