ಮಡಿಕೇರಿ ಜೂ.19 NEWS DESK : ಪಿಕ್‌ಅಪ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಗೋಣಿಕೊಪ್ಪ- ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಘಟನೆಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಗೋಣಿಕೊಪ್ಪ ಗ್ರಾ.ಪಂ ಮಾಜಿ ಸದಸ್ಯೆ ಪ್ರಭಾವತಿ ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂಬದಿ ಸವಾರರಾದ 10ನೇ ತರಗತಿ ವಿದ್ಯಾರ್ಥಿನಿ ಅನು ಚಿಕಿತ್ಸೆ ಫಲಿಸದೆ ಇಂದು ನಿಧನ ಹೊಂದಿದ್ದಾಳೆ.
ಪಿಕ್‌ಅಪ್ ವಾಹನ ಚಾಲಕನನ್ನು ವಶಕ್ಕೆ ಪಡೆದಿರುವ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಭಾವತಿ ಅವರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗೋಣಿಕೊಪ್ಪ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ಅನು, ಶ್ರೀಜಾ ಎಂಬುವವರ ಪುತ್ರಿಯಾಗಿದ್ದು, ಪ್ರಭಾವತಿ ಅವರ ಬಳಿ ಮನೆ ಪಾಠ ಹೇಳಿಸಿಕೊಳ್ಳುತ್ತಿದ್ದಳು. ಇಬ್ಬರು ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.










