ಸೋಮವಾರಪೇಟೆ ಜೂ.20 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಖಂಡಿಸಿ ಸೋಮವಾರಪೇಟೆಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ಬಂದ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಕಾರ್ಯಕರ್ತರು ತಕ್ಷಣ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಮುಂದುವರಿಯಲು ಅಸಮರ್ಥವಾಗಿದೆ, ನೌಕರರಿಗೆ ವೇತನ ನೀಡುವುದಕ್ಕೂ ಹಣವಿಲ್ಲದ ಪರಿಸ್ಥಿತಿಯಲ್ಲಿದೆ ಎಂದು ಟೀಕಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ದರ ದುಬಾರಿಯಾಗಲಿದ್ದು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ಜನರ ಹಾದಿ ತಪ್ಪಿಸುವುದಕ್ಕಾಗಿ ನೀಟ್ ಪರೀಕ್ಷೆಯ ಕುರಿತು ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಯಾರನ್ನೂ ನಾವು ಸಮರ್ಥಿಸಿಕೊಳ್ಳುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷಯಾಗಲಿ. ಆದರೆ ಸರಕಾರ ಮೊದಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಿ ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಗೌತಮ್ ಗೌಡ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










