ವಿರಾಜಪೇಟೆ ಜೂ.20 NEWS DESK : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ವಿರಾಜಪೇಟೆ ಪಟ್ಟಣದಲ್ಲಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗಡಿಯಾರ ಕಂಬದ ಬಳಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರುಗಳ ಪ್ರತಿಕೃತಿಯನ್ನು ದಹಿಸಿ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯ ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ. ಆಟೋ, ಟ್ಯಾಕ್ಸಿ ಚಾಲಕರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಆರೋಪಿಸಿದರು.
ಸರಕಾರ ತಕ್ಷಣ ಬೆಲೆ ಇಳಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ, ಪ್ರಧಾನ ಕಾರ್ಯದರ್ಶಿಗಳಾದ ಮಂಜು ಗಣಪತಿ, ಅಜಿತ್ ಕರುಂಬಯ್ಯ, ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಿವಿಧ ಮೋರ್ಚಾ, ಪ್ರಕೋಷ್ಠ, ಶಕ್ತಿ ಕೇಂದ್ರ, ಬೂತ್ ಮತ್ತಿತರ ಘಟಕಗಳ ಪ್ರಮುಖರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.











