ಮಡಿಕೇರಿ, ಜೂ.24 NEWS DESK : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಗುಣಾತ್ಮಕ ಫಲಿತಾಂಶ ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿರುವುದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಶ್ಲಾಘಿಸಿದ್ದಾರೆ.
ಕೊಡಗು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಅಭಿನಂದಿಸಿದ ಅವರು, ಬರುವ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಎಲ್ಲರೂ ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.
ಪ್ರತಿಭಾವಂತ ಜಿಲ್ಲೆಗಳು ಎನಿಸಿರುವ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಮೊದಲಿನಿಂದಲೂ ಈ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಗಳಿಸುತ್ತಾ ಬಂದಿವೆ. ಹಾಗೆಯೇ, ಮಲೆನಾಡಾದ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಕೂಡ ಪ್ರತಿಭಾವಂತರಿದ್ದು, ಇಲ್ಲಿನ ಜನತೆ ಕೂಡ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ಮಾದರಿಯಲ್ಲಿ ಜಿಲ್ಲೆಯ ಮಕ್ಕಳು ಕೂಡ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಹೊಂದಲು ಜಿಲ್ಲೆಯ ಜನತೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಸಿಂಧ್ಯ ಮನವಿ ಮಾಡಿದರು.