ಕುಶಾಲನಗರ, ಜೂ.26 NEWS DESK : ಉತ್ತರ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್, ವಿಜ್ಞಾನ ಸಂಘ, ಎನ್.ಎಸ್.ಎಸ್.ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ವತಿಯಿಂದ
ಕುಶಾಲನಗರ ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಯಿತು.
ಸಮಾಜ ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ ಮಾತನಾಡಿ, ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇದರಿಂದಾಗಿ ಬಹುತೇಕ ಇಡೀ ಪೀಳಿಗೆಯು ವಿನಾಶದತ್ತ ಸಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮಾದಕ ವ್ಯಸನ ಮತ್ತು ದುರುಪಯೋಗದ ಹಿಡಿತದಿಂದ ಯುವ ಸಮುದಾಯ ಹಾಗೂ ಜನರನ್ನು ರಕ್ಷಿಸಲು, ಮಾದಕ ವ್ಯಸನ ಮತ್ತು ಅಕ್ರಮ ಸಾಗಣೆ ವಿರುದ್ಧ ಅರಿವು ಮೂಡಿಸುವ ದೃಷ್ಟಿಯಿಂದ ಪ್ರತಿ ವರ್ಷ ಜೂನ್ 26ರಂದು ಅಂತಾರಾಷ್ಟ್ರೀಯ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮಾದಕ ದ್ರವ್ಯಗಳ ಬಳಕೆ ಮತ್ತು ಕಳ್ಳ ಸಾಗಣೆ ಸಮಾಜದಲ್ಲಿ ದೊಡ್ಡ ಪಿಡುಗಾಗಿದೆ. ಇವುಗಳ ದೀರ್ಘಾವಧಿಯ ಬಳಕೆಯಿಂದ ಕಳಪೆ ಆರೋಗ್ಯ, ಮಾನಸಿಕ ಅಸ್ವಸ್ಥತೆ ಹಾಗೂ ಸಾವಿಗೂ ಕಾರಣವಾಗುತ್ತದೆ ಎಂದರು.
ಈ ದಿನವನ್ನು ಆಚರಿಸುವ ಉದ್ದೇಶವು ಎಲ್ಲಾ ಮಾದಕ ವಸ್ತುಗಳ ವಿರುದ್ಧ ಜನಜಾಗೃತಿ ಮೂಡಿಸಲು ಹಾಗೂ ಭಾರತವನ್ನು ಮಾದಕ ವ್ಯಸನ ಮತ್ತು ವ್ಯಸನದಿಂದ ಮುಕ್ತಗೊಳಿಸುವುದಾಗಿದೆ ಎಂದರು.
ವಿಜ್ಞಾನ ಸಂಘದ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಮಾದಕ ವ್ಯಸನದಿಂದ ಮುಕ್ತರಾಗುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವಿಸುವುದಿಲ್ಲ ಹಾಗೂ ಈ ಬಗ್ಗೆ ಸಮುದಾಯದಲ್ಲಿ ಜನಜಾಗೃತಿ ಮೂಡಿಸುವುದಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ವಿ.ಎಂ.ನವೀನ, ಶಾಲೆಯ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.