ಮಡಿಕೇರಿ ಜೂ.26 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರತಿಕೃತಿ ದಹಿಸಿದ ಬಿಜೆಪಿ ಕ್ರಮ ಖಂಡನೀಯವೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಶಾಸಕ ಎ.ಎಸ್.ಪೊನ್ನಣ್ಣ ಅವರು ಪಕ್ಷಾತೀತ ಮತ್ತು ಜಾತ್ಯತೀತವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಕಾಲದಲ್ಲಿ ಮಾಡುತ್ತಿದ್ದಾರೆ, ಬಡವರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರ ಕರೆಗೂ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೀಗಿರುವಾಗ ಬಿಜೆಪಿ ಮಂದಿ ಕೇವಲ ಮತಕ್ಕಾಗಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚು ಮಾಡಿರುವುದಕ್ಕೆ ಬಡವರಿಗೆ ಹಾಗೂ ಕೂಲಿಕಾರ್ಮಿಕರಿಗೆ ತೊಂದರೆಯಾಗಿದೆ ಎಂದು ಹೇಳುತ್ತಿರುವ ಬಿಜೆಪಿ ಮಂದಿ ಕಳೆದ 10 ವರ್ಷಗಳ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ದ್ವಿಗುಣಗೊಳಿಸಿದೆ. ಈ ಬಗ್ಗೆ ಯಾಕೆ ಬಿಜೆಪಿ ಮಂದಿ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.
ಸದ್ದಿಗೋಷ್ಠಿಯಲ್ಲಿ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಎಲ್.ಕುಮಾರ್ ಉಪಸ್ಥಿತರಿದ್ದರು.