ಮಡಿಕೇರಿ ಜೂ.27 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಮತ್ತು ರಾಜ್ಯ ಸರ್ಕಾರದಿಂದ ಪರಿಶಿಷ್ಟರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.28 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನಲ್ಲಿ ಕೊಡಗು ಜಿಲ್ಲಾ ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಎಸ್‍ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಪರಿಶಿಷ್ಟರ ಅಭ್ಯುದಯಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಅಲ್ಲದೆ ಹೆಚ್ಚು ಅನುದಾನ ಮೀಸಲಿಡಲಾಗಿತ್ತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೂಡ ಪರಿಶಿಷ್ಟರ ಅಭಿವೃದ್ಧಿಗಾಗಿ ಹಣ ನೀಡುತ್ತಿದೆ. ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳನ್ನು ಈಡೇರಿಸಲು ಪರಿಶಿಷ್ಟರ ಕಲ್ಯಾಣ ಇಲಾಖೆಗಳ ಅನುದಾನವನ್ನು ಬಳಸಿಕೊಳ್ಳುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲೂ ಇದೇ ರೀತಿಯ ಅನ್ಯಾಯವಾಗಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯ ಸಂದರ್ಭ ರಾಜ್ಯ ಸರ್ಕಾರದ ದುರಾಡಳಿತ, ಪರಿಶಿಷ್ಟರ ಕಡೆಗಣನೆಯನ್ನು ಖಂಡಿಸಲಾಗುವುದು ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.