ಮಡಿಕೇರಿ ಜೂ.29 NEWS DESK : ಮಡಿಕೇರಿಯ ಮಲ್ಲಿಕಾರ್ಜುನ ನಗರ ಹಾಗೂ ತ್ಯಾಗರಾಜ ಕಾಲೋನಿಯ ಮಳೆಹಾನಿ ಪ್ರದೇಶಗಳಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.
ಹೆಚ್ಚಿನ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲ್ಲಿನ ನಾಗರಿಕರು ಸಹ ಹೆಚ್ಚಿನ ಜಾಗೃತಿ ವಹಿಸಬೇಕಿದೆ ಎಂದರು. ಸ್ಥಳೀಯರ ಕುಂದುಕೊರತೆಯನ್ನು ಇದೇ ಸಂದರ್ಭದಲ್ಲಿ ಶಾಸಕರು ಆಲಿಸಿದರು.
ನಂತರ ನಗರದ ಸ್ಟೀವರ್ಟ್ ಹಿಲ್ ಬಳಿಯಿರುವ ತ್ಯಾಜ್ಯ ಘಟಕ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಜಾಗ ಸಂಬಂಧ ಹೈಕೋರ್ಟ್ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಬದಲಿ ಜಾಗ ಗುರುತಿಸುವಂತೆ ಕಂದಾಯ ಹಾಗೂ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಜಾಗವನ್ನು ಅಭಿವೃದ್ಧಿ ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ವಿಜಯ್, ಪರಿಸರ ಎಂಜಿನಿಯರ್ ಸೌಮ್ಯ, ಎಇಇ ಹೇಮಂತ್ ಕುಮಾರ್ ಇತರರು ಇದ್ದರು.
ಬಳಿಕ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಅಹವಾಲು ಆಲಿಸಿದ ಶಾಸಕರಾದ ಡಾ.ಮಂತರ್ ಗೌಡ ಅವರು ವಿದ್ಯಾರ್ಥಿ ನಿಲಯದಲ್ಲಿ ಶುಚಿತ್ವ ಕಾಪಾಡಬೇಕು. ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಸಮಸ್ಯೆಗಳು ಇದ್ದಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಹಾಗೂ ಇತರರು ಇದ್ದರು.
ಇದಕ್ಕೂ ಮೊದಲು ನಗರದ ಜಿಲ್ಲಾ ಪಂಚಾಯತ್ನ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಮಂತರ್ ಗೌಡ ಅವರು ಸಾರ್ವಜನಿಕರ ಕುಂದುಕೊರತೆ ಆಲಿಸಿ ಸ್ಥಳೀಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದರು.
ಮನೆ ಹಾಗೂ ನಿವೇಶನ ಒದಗಿಸುವಂತೆ ಶಾಸಕರಲ್ಲಿ ಸಾರ್ವಜನಿಕರು ಮನವಿ ಮಾಡಿದರು.
ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರಬೇಕು. ತಮ್ಮ ಅಹವಾಲುಗಳನ್ನು ಆದಷ್ಟು ಶೀಘ್ರ ಪರಿಹರಿಸಲಾಗುವುದು ಎಂದು ಶಾಸಕರು ತಿಳಿಸಿದರು.
ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆ ಆವರಣವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಭಿವೃದ್ಧಿಗೆ ಸಂಬಂಧಿಸಿದಂತೆ ಅಂದಾಜುಪಟ್ಟಿ ಸಲ್ಲಿಸುವಂತೆ ಎಂಜಿನಿಯರ್ಗಳಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೌರಾಯುಕ್ತ ವಿಜಯ್ ಇತರರು ಇದ್ದರು.
ಪ್ರಸಕ್ತ ಸಾಲಿನ ಆಯವ್ಯಯ ಭಾಷಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ ತಲಾ 100 ಸಂಖ್ಯಾಬಲದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ 150 ಹೊಸ ವಿದ್ಯಾರ್ಥಿ ನಿಲಯ ಮಂಜೂರು ಮಾಡುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ ಜಿಲ್ಲಾ ಕೇಂದ್ರದಲ್ಲಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಆರಂಭಕ್ಕೆ ಸರ್ಕಾರ ಮಂಜೂರಾತಿ ನೀಡಿದೆ.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಹಾಗೂ ಶಾಸಕರಾದ ಡಾ.ಮಂತರ್ ಗೌಡ ಅವರ ಪ್ರಯತ್ನದಿಂದ ಕೊಡಗು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.