ಮಡಿಕೇರಿ ಜು.2 NEWS DESK : ಟಿ.ಎಂ.ಶಹೀದ್ ತೆಕ್ಕಿತ್ ಅಭಿನಂದನಾ ಸಮಿತಿ ವತಿಯಿಂದ ಜು.6 ರಂದು ತೆಕ್ಕಿಲ್ ಗ್ರಾಮಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿನಂದನಾ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ 55 ಸೇವಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದು, ಚಟುವಟಿಕೆಗಳ ಸವಲತ್ತುಗಳನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಭಾಗೀರಥಿ ಮುರುಳ್ಯ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಲಯನ್ ಎಂ.ಜೆ.ಎಫ್ ಎಂ.ಬಿ ಸದಾಶಿವ, ಮಾಜಿ ಸಚಿವ ರಮಾನಾಥ ರೈ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಾಮಾಜಿಕ, ಕೃಷಿ, ಧಾರ್ಮಿಕ, ಸಾಂಸ್ಕೃತಿಕ, ಸಹಕಾರ, ಶಿಕ್ಷಣ, ಉದ್ಯಮ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮೂರುವರೆ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಶಹೀದ್ ತೆಕ್ಕಿಲ್, ಜನಾನುರಾಗಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾಗಿರುವ ಅವರು ದೇಶ, ವಿದೇಶಗಳಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ನಿಟ್ಟಿನಲ್ಲಿ ಶಹೀದ್ ತೆಕ್ಕಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ರಾಧಾಕೃಷ್ಣ, ಮಹಮ್ಮದ್ ಇಕ್ಬಾಲ್, ರಂಜಿತ್, ಅಬ್ಬಾಸ್, ಪರಶುರಾಮ್ ಚಿಲ್ತಡ್ಕ ಉಪಸ್ಥಿತರಿದ್ದರು.