ಮಡಿಕೇರಿ ಜು.5 NEWS DESK : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನೂತನ ಕಟ್ಟಡಕ್ಕೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಆಸ್ಪತ್ರೆಗೆ ತೆರಳಿ ತುರ್ತು ಚಿಕಿತ್ಸಾ ವಿಭಾಗ, ರಕ್ತನಿಧಿ ಕೇಂದ್ರ, ಹೊಸದಾಗಿ ಅಳವಡಿಸಿರುವ ಎಂಆರ್ಐ ಸ್ಕ್ಯಾನಿಂಗ್ ಕೇಂದ್ರ ಮತ್ತಿತರ ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.
ವೀಕ್ಷಣೆ ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ 300 ಹಾಸಿಗೆ ಆಸ್ಪತ್ರೆಯಲ್ಲಿ ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ 55 ಕೋಟಿ ರೂ. ಬಿಡುಗಡೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಬಿಡುಗಡೆಗೆ ಪ್ರಯತ್ನಿಸಲಾಗುವುದು. ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಯಾಗಿ ಆಸ್ಪತ್ರೆಯ ಸೇವೆ ಒದಗಿಸಲಾಗುತ್ತಿದೆ ಎಂದರು.
ಈಗಾಗಲೇ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್ಐ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ಸಚಿವರು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿನ ಖಾಲಿ ಇರುವ ವೈದ್ಯರ ಹುದ್ದೆಗಳು, ತಜ್ಞರು ಹಾಗೂ ಇತರರ ನೇಮಕ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.
ಬಳಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಸುಜಾತ ರಾಥೋಡ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ಡಾ.ರೂಪೇಶ್ ಗೋಪಾಲ್, ಡಾ.ಲೋಕೇಶ್, ವಿವಿಧ ವಿಭಾಗದ ಮುಖ್ಯಸ್ಥರು, ಇತರರು ಇದ್ದರು.