ಮಡಿಕೇರಿ ಜು.6 NEWS DESK : 2023-24ನೇ ಸಾಲಿನಲ್ಲಿ ಕಡಗದಾಳು ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ.100 ರಷ್ಟು ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಸಮಾಜ ಸೇವಕರು ಹಾಗೂ ದಾನಿಗಳಾದ ಟಿ.ಆರ್.ವಾಸುದೇವ್, ಪ್ರಸ್ತುತ ದಿನಗಳಲ್ಲಿ ಶಿಕ್ಷಕರಲ್ಲಿ ದೇವರನ್ನು ಕಾಣುತ್ತಿದ್ದೇವೆ. ಶಿಕ್ಷಕರನ್ನು ಗೌರವಿಸಿದರೆ ಎಲ್ಲ ಕೆಲಸ ಕಾರ್ಯಗಳು ನೆರವೇರುತ್ತದೆ ಎಂದರು.
ವಿದ್ಯಾರ್ಥಿಗಳು ಮೊಬೈಲ್‍ನಿಂದ ದೂರವಿದ್ದು, ಉತ್ತಮವಾಗಿ ಓದಿ ಶಾಲೆಗೆ ಒಳ್ಳೆಯ ಹೆಸರು ತರಬೇಕು ಮತ್ತು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು.
ಸಂಘಟನೆಯ ಜಿಲ್ಲಾ ಸಂಚಾಲ ಹೆಚ್.ಎಲ್.ದಿವಾಕರ್ ಪ್ರಾಸ್ತವಿಕ ಮಾತನಾಡಿ, ಕೊಡಗಿನ ಎಲ್ಲಾ ಸರಕಾರಿ ಶಾಲಾ, ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬರಬೇಕು ಎಂಬ ಕಾರಣಕ್ಕಾಗಿ ಸಂಘಟನೆಯ ವತಿಯಿಂದ ಸುಮಾರು 10 ವರ್ಷಗಳಿಂದ ಉತ್ತಮ ಫಲಿತಾಂಶ ಬಂದ ಸರಕಾರಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರನ್ನು ಹಾಗೂ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಗಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು.
ಸಮಾಜ ಸೇವಕ ಉಣ್ಣಿಕೃಷ್ಣ ಮಾತನಾಡಿ, ಸಂಘಟನೆ ವತಿಯಿಂದ ಉತ್ತಮ ಕಾರ್ಯಕ್ರಮ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಸಂಘಟನೆಗಳು ಸ್ಪಂದಿಸುವಂತಾಗಬೇಕು ಎಂದರು.
ರಾಜರಾಜೇಶ್ವರಿ ಶೋ ರೂಂನ ಮಾಲೀಕ ಕಿರಣ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳು ಬುದ್ದಿವಂತರು, ಹಲವು ಸಮಸ್ಯೆಗಳ ನಡುವೆಯೂ ಉತ್ತಮ ಅಂಕ ಪಡೆಯುವುದು ಶ್ಲಾಘನೀಯ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲೆಯ ಶಿಕ್ಷಕ ದೀಪಕ್, ಶಿಕ್ಷಕ ವೃತ್ತಿಯನ್ನು, ಅವರ ಶ್ರಮವನ್ನು ಗುರುತಿಸಿ ಸನ್ಮಾನ ಮಾಡುವುದು ಶ್ಲಾಘನೀಯ ಎಂದ ಅವರು ಸಂಘಟನೆಗೆ ಅಭಿನಂದನೆ ಸಲ್ಲಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಭವತಿ ಮಾತನಾಡಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಶ್ರಮವನ್ನು ಗುರುತಿಸಿ ಸನ್ಮಾನ ಮಾಡಿದ ದಲಿತ ಸಂಘರ್ಷ ಸಮಿತಿ ಮತ್ತು ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಶಾಲೆಯ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದರು.
ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾಸಿರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಡಗದಾಳು ಗ್ರಾ.ಪಂ ಅಧ್ಯಕ್ಷರಾದ ಭರತಿ, ಅಭಿವೃದ್ಧಿ ಅಧಿಕಾರಿ ಅನಿತ, ಮೊದೂರು ತೋಟದ ಮಾಲೀಕ ತಿಮ್ಮಯ್ಯ ಹಾಜರಿದ್ದರು. ಸಂಘಟನೆಯ ಮಹಿಳಾ ಜಿಲ್ಲಾ ಸಂಚಾಲಕಿ ಪ್ರೇಮ ಕೃಷ್ಣಪ್ಪ ಸ್ವಾಗತಿಸಿದರು, ಆರತಿ ನಿರೂಪಿಸಿದರು, ಶಿಕ್ಷಕಿ ಭಾರತಿ ವಂದಿಸಿದರು.