


ಮಡಿಕೇರಿ ಜು.12 NEWS DESK : ಮುಡಾ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನೈತಿಕತೆ ಆಧಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನೀಡುತ್ತಿರುವ ಸ್ಪಷ್ಟೀಕರಣಗಳು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. 14 ನಿವೇಶನಗಳ ಹಂಚಿಕೆಯಲ್ಲಿ ನಿಯಮ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. 2020 ರ ನಿಯಮಾನುಸಾರ ಮುಡಾ ಯಾವುದೇ ನಿರ್ಣಯ ಕೈಗೊಂಡರು ಅದನ್ನು ಸರ್ಕಾರಕ್ಕೆ ಕಳುಹಿಸಿ ಅನುಮತಿ ಪಡೆಯಬೇಕು. ಆದರೆ ಈ ಪ್ರಕರಣದಲ್ಲಿ ಮುಡಾ ನಿರ್ಣಯವನ್ನು ಸರ್ಕಾರಕ್ಕೆ ಕಳುಹಿಸಿಯೇ ಇಲ್ಲ ಎಂದು ಆರೋಪಿಸಿದರು.
ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ತನಿಖೆ ಮುಗಿಯುವವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಬಾರದು ಎಂದು ಆಗ್ರಹಿಸಿದರು.
ಅಧಿಕಾರಿಗಳ ಮೂಲಕ ತನಿಖೆ ನಡೆಸುವುದಾಗಿ ಹೇಳುತ್ತಿದ್ದಾರೆ, ಮುಡಾ ಪ್ರಕರಣದಲ್ಲಿ ಸ್ವತ: ಮುಖ್ಯಮಂತ್ರಿಗಳ ಪತ್ನಿಯ ಹೆಸರೇ ಇರುವುದರಿಂದ ಅಧಿಕಾರಿಗಳು ಯಾವ ರೀತಿಯ ತನಿಖೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದ ಕೆ.ಜಿ.ಬೋಪಯ್ಯ ಅವರು, ಸಿಬಿಐ ತನಿಖೆಯಿಂದ ಮಾತ್ರ ಪಾರದರ್ಶಕ ತನಿಖೆ ನಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಮುಖ್ಯಮಂತ್ರಿಗಳ ಕಡೆಯಿಂದ ಯಾವುದೇ ತಪ್ಪು ನಡೆದಿಲ್ಲವೆಂದಾದರೆ ಧೈರ್ಯವಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ, ತಾವು ಶುದ್ಧ ಹಸ್ತರೆಂದು ಸಾಬೀತು ಪಡಿಸಲಿ ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲೂ ಕೋಟ್ಯಾಂತರ ರೂ. ಅನುದಾನ ನಿಯಮಬಾಹಿರವಾಗಿ ಹಂಚಿಕೆಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಹಣ ವರ್ಗಾವಣೆ ಸಂದರ್ಭ ಆರ್ಥಿಕ ಇಲಾಖೆಯ ಅನುಮತಿ ಪಡೆಯಬೇಕಾಗುತ್ತದೆ. ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇರುವುದರಿಂದ ಈ ಹಗರಣಕ್ಕೆ ಸಂಬಂಧಿಸಿದಂತೆಯೂ ರಾಜೀನಾಮೆ ಸಲ್ಲಿಸಿ ತನಿಖೆಗೆ ಸಹಕರಿಸಬೇಕು. ಎಸ್‍ಐಟಿ ತನಿಖೆ ಎಂದು ಕೈತೊಳೆದುಕೊಳ್ಳುವ ಸಂಶಯವಿದೆ ಎಂದು ಆರೋಪಿಸಿದ ಬೋಪಯ್ಯ ಅವರು, ಸಿಬಿಐ ತನಿಖೆಯಾಗಬೇಕೆಂದು ಒತ್ತಾಯಿಸಿದರು.
::: ಹೋರಾಟಕ್ಕೆ ತಡೆ :::
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ರಾಜ್ಯವ್ಯಾಪಿ ಹೋರಾಟ ನಡೆಸುತ್ತಿದೆ. ಈ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವಾಗಿ ಸರ್ಕಾರ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಂಧಿಸಿದೆ. ಅಲ್ಲದೆ ಪ್ರತಿಭಟನೆಗೆ ಅವಕಾಶ ನೀಡದೆ ತಡೆಯೊಡ್ಡುತ್ತಿದೆ, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದರು.
ಸರ್ಕಾರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ, ಸಾಲು ಸಾಲು ಹಗರಣಗಳಲ್ಲಿ ತೊಡಗಿದೆ. ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಸರ್ಕಾರದಿಂದ ಯಾವುದೇ ಅಡ್ಡಿ, ಆತಂಕ ಎದುರಾದರು ಜನರಿಗೆ ನ್ಯಾಯ ದೊರಕಿಸಲು ಬಿಜೆಪಿ ನಿರಂತರ ಹೋರಾಟವನ್ನು ನಡೆಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ಚಲನ್ ಕುಮಾರ್ ಹಾಗೂ ವಕ್ತಾರ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.