ಮಡಿಕೇರಿ ಜು.13 NEWS DESK : ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಕಳೆದ 1 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವರ್ಣಿತ್ ನೇಗಿ ಅವರಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಕೊಡಗು ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಂದ ಸನ್ಮಾನಿ ಬೀಳ್ಕೊಡುಗೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲೆಯ ಉತ್ತಮ ಆಡಳಿತಕ್ಕೆ ತಂಡದ ಕೋಚ್ ರೀತಿ ಶ್ರಮಿಸಿದ್ದು, ಮಾತು ಕಡಿಮೆ ಕೆಲಸ ಜಾಸ್ತಿ ಎಂಬ ತತ್ವದ ಮೇಲೆ ಕೆಲಸ ನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಮುಂದಿನ ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಸಿಗಲಿ ಎಂದು ಶುಭ ಕೋರಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ರಾಮಾರಾಜನ್ ಮಾತನಾಡಿ, ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಎಂಬುದು ನಿಶ್ಚಿತ. ಕುಟುಂಬದ ಸದಸ್ಯರಂತೆ ಹಾಗೂ ಉತ್ತಮ ಸ್ನೇಹಿತರಾಗಿ ಕಳೆದ ಒಂದು ವರ್ಷದಿಂದ ಇದ್ದು, ಇಂದು ವರ್ಗಾವಣೆಗೊಳ್ಳುತ್ತಿರುವುದು ಬೇಸರವನ್ನುಂಟು ಮಾಡಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿ.ಪಂ.ಸಿ.ಇ.ಒ ವರ್ಣೀತ್ ನೇಗಿ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ತೃಪ್ತಿಯನ್ನು ತಂದಿದೆ, ಪ್ರಾರಂಭಿಕ ದಿನಗಳಲ್ಲಿ ಸಾಕಷ್ಟು ಸವಾಲುಗಳು ಎದುರಾಯಿತು. ಕಾಲ ಕ್ರಮೇಣ ಎಲ್ಲಾ ಸರಿ ಹೊಂದಿ ಇಂದು ವರ್ಗಾವಣೆಗೊಂಡು ಹೋಗುತ್ತಿದ್ದೇನೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲೆಯ ಇಲಾಖೆಗಳ ಅಭಿವೃದ್ಧಿಗೆ ಶ್ರಮಿಸಿದ್ದೀರಾ ಎಂದು ಅಭಿನಂದನೆ ಸಲ್ಲಿಸಿದರು.
ಬೀಳ್ಕೊಡುಗೆ ಸಮಾರಂಭದಲ್ಲಿ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ , ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.