ಮಡಿಕೇರಿ ಜು.16 NEWS DESK : ಯಾರೋ ಕಿಡಿಗೇಡಿಗಳು ನನ್ನ ಮೊಬೈಲ್ ಸಂಖ್ಯೆಯನ್ನು ಹ್ಯಾಕ್ ಮಾಡಿದ್ದು, ಜು.15 ರಂದು ಮಧ್ಯಾಹ್ನ 2 ಗಂಟೆಗೆ ಹಾಗೂ ರಾತ್ರಿ ವಾಟ್ಸಪ್ ಸಂಪರ್ಕದಲ್ಲಿರುವ ವ್ಯಕ್ತಿಗಳ ಸಂಖ್ಯೆಗಳಿಗೆ ಮತ್ತು ಗ್ರೂಪ್‍ಗಳಿಗೆ ಅಶ್ಲೀಲ ಸಂದೇಶಗಳನ್ನು ರವಾನಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿರುವುದಾಗಿ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಸೋಮವಾರ ಕಾರ್ಯನಿಮಿತ್ತ ಮೈಸೂರಿನಲ್ಲಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಕೆಲವರು ಕರೆ ಮಾಡಿ ಈ ಬಗ್ಗೆ ಪ್ರಶ್ನಿಸಿದಾಗ ನನ್ನ ಅರಿವಿಗೆ ಬಂದಿರುತ್ತದೆ. ನನಗೂ ಈ ಅಶ್ಲೀಲ ಸಂದೇಶಗಳಿಗೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದರು.
ನನ್ನ ಸಂಖ್ಯೆಯಿಂದ ಅಶ್ಲೀಲ ಸಂದೇಶ ಬಂದಲ್ಲಿ ಯಾವುದೇ ರೀತಿಯ ಪ್ರತ್ಯುತ್ತರ ನೀಡದಂತೆ ಮನವಿ ಮಾಡಿಕೊಳ್ಳುತ್ತೇನೆ. ನಾನು ಸಮಾಜ ಸೇವಕನಾಗಿದ್ದು, ಈ ಪ್ರಕರಣದಿಂದ ನನ್ನ ಸಾಮಾಜಿಕ ಜೀವನಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈಗಾಗಲೇ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಾರ್ವಜನಿಕರು ಮೊಬೈಲ್ ಸಂಖ್ಯೆ ಹ್ಯಾಕ್ ಮಾಡುವ ಕಿಡಿಗೇಡಿಗಳ ಬಗ್ಗೆ ಎಚ್ಚರವಹಿಸಬೇಕೆಂದು ಎ.ಪಿ.ದೀಪಕ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದೀಪಕ್ ಅವರ ತಂದೆ ಕೆ.ಸಿ.ಪೊನ್ನಪ್ಪ ಉಪಸ್ಥಿತರಿದ್ದರು.