ಮಡಿಕೇರಿ ಜು.19 NEWS DESK : ಕೊಡಗು ಮತ್ತು ಮೈಸೂರು ವಿಭಿನ್ನವಾದ ಸಂಸ್ಕೃತಿ ಹಾಗೂ ಪ್ರಕೃತಿಯನ್ನು ಹೊಂದಿದೆ. ಕೊಡಗು ಕೊಡಗಾಗಿ, ಮೈಸೂರು ಮೈಸೂರಾಗಿಯೇ ಉಳಿಯಬೇಕು ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಡಿಕೇರಿಯ ಕೆಳಗಿನ ಕೊಡವ ಸಮಾಜದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿಶಿಷ್ಟ ಆಚಾರ ವಿಚಾರಗಳನ್ನು ಹೊಂದಿರುವ ಕೊಡಗು ಜಿಲ್ಲೆಯ ಸಂಸ್ಕೃತಿ ಮತ್ತು ಪ್ರಕೃತಿಯನ್ನು ನಾವೆಲ್ಲರೂ ಉಳಿಸಬೇಕು. ಅದಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಲೋಕಸಭಾ ಚುನಾವಣೆಯ ಸಂದರ್ಭ ಅನೇಕರು ಅಪಪ್ರಚಾರಗಳನ್ನು ಮಾಡಿದರು. ಆದರೆ ಇದು ಯಾವುದಕ್ಕೂ ಕಿವಿಗೊಡದೆ ಪ್ರಧಾನಿ ನರೇಂದ್ರಮೋದಿ ಅವರು ಕಳೆದ 10 ವರ್ಷಗಳ ಕಾಲ ಮಾಡಿದ ಅಭಿವೃದ್ಧಿಯ ಸಾಧನೆಯ ಆಧಾರದಲ್ಲಿ ಮತ್ತು ಕಾರ್ಯಕರ್ತರೆಲ್ಲರ ಶ್ರಮದಿಂದ ಚುನಾವಣೆಯನ್ನು ಎದುರಿಸಿ ಜನರ ಆಶೀರ್ವಾದ ಪಡೆದೆವು. ಮುಂಬರುವ ಜಿ.ಪಂ ಮತ್ತು ತಾ.ಪಂ ಚುನಾವಣೆಗಳಲ್ಲೂ ಗೆಲುವಿಗಾಗಿ ಶ್ರಮಿಸೋಣವೆಂದು ಯದುವೀರ್ ಒಡೆಯರ್ ಹೇಳಿದರು.
ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿಯ ನೈಜ ಬಲ ಎಂದು ಬಣ್ಣಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಕೂಡ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಪ್ರಮುಖರಾದ ರೀನಾ ಪ್ರಕಾಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ತಾಲ್ಲೂಕು ಮಂಡಲ, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
:: ಕಾರ್ಯಕಾರಿಣಿ ಸಭೆ :: ಮಧ್ಯಾಹ್ನ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.