ಬೆಂಗಳೂರು ಜು.23 NEWS DESK : ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಮತ್ತು ಇಡಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಸಚಿವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ. ಇಡಿ ದುರುಪಯೋಗವಾಗುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ ಎಂದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತಿಳಿಸಿದರು. ಸದನದಿಂದ ಹೊರಗೆ ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಎಂಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾಂಗೆಸ್ ಸಚಿವರು, ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










