ವಯನಾಡು NEWS DESK ಜು.30 : ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಸಂಭವಿಸಿದ ಜಲಸ್ಫೋಟ ಮತ್ತು ಗುಡ್ಡ ಕುಸಿತದಲ್ಲಿ ಮಕ್ಕಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಸಂಶಯವಿದೆ. ವಯನಾಡು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅನಾಹುತಗಳ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ. ತುರ್ತು ಸಹಾಯದ ಅಗತ್ಯವಿರುವವರು ಈ ಎರಡು ಸಂಖ್ಯೆಗಳ ಮೂಲಕ ಅಧಿಕಾರಿಗಳನ್ನು ಸಂಪರ್ಕಿಸಬಹುದು 9656938689 ಮತ್ತು 8086010833 ಎಂದು ಪ್ರಕಟಣೆ ತಿಳಿಸಿದೆ. ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ವಿವಿಧ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಭೀತಿಯ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಚುರಲಮಲದಿಂದ ಮುಂಡಕೈಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ.ಆರ್ ತಿಳಿಸಿದ್ದಾರೆ. ಮೃತರಲ್ಲಿ ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಮೃತರಾಗಿದ್ದಾರೆ. ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಮಂತೋಡು ನದಿಯ ಬಾಣಾಸುರ ಸಾಗರ ಅಣೆಕಟ್ಟಿನ ಶೆಟರ್ ನ್ನು ತೆರೆಯಲಾಗಿದ್ದು, ಕೆಳಭಾಗ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಅಧಿಕಾರಿಗಳ ಪ್ರಕಾರ, ಭೂಕುಸಿತದ ಹಿನ್ನೆಲೆಯಲ್ಲಿ ಹಲವಾರು ಕುಟುಂಬಗಳನ್ನು ವಿವಿಧ ಶಿಬಿರಗಳಿಗೆ ಅಥವಾ ಅವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ಕಣ್ಣೂರು ರಕ್ಷಣಾ ಡಿಕ್ಯೂರಿಟಿ ಕಾರ್ಪೊರೇಷನ್‌ಗಳ ಎರಡು ತಂಡಗಳಿಗೆ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಲು ವಯನಾಡ್‌ಗೆ ತೆರಳಲು ಸೂಚನೆ ನೀಡಲಾಗಿದೆ. ಸಂತ್ರಸ್ತ ಪ್ರದೇಶಗಳ ಸ್ಥಳೀಯರು ಹೇಳುವಂತೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಘಟನೆ ಕುರಿತು ಸಂತಾಪ ಸೂಚಿಸಿದ್ದಾರೆ. ಎಲ್ಲಾ ರೀತಿಯ ನೆರವು ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.