ಮಡಿಕೇರಿ NEWS DESK ಆ.1 : ಮಳೆಹಾನಿ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಿರುವುದು ಬಿಟ್ಟರೆ ಬೇರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆAದು ಬಿಜೆಪಿ ಮುಖಂಡ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಟೀಕಿಸಿದ್ದಾರೆ. ಕೊಡಗು ಜಿಲ್ಲೆಯ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಸಂಕಷ್ಟದಲ್ಲಿರುವ ಜನರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ, ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು. ಅಧಿಕ ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಪರಿಹಾರದ ರೂಪದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು. ಮನೆ ಕಳೆದುಕೊಂಡವರಿಗೆ ಮನೆ ಬಾಡಿಗೆ ನೀಡಬೇಕು ಮತ್ತು ನೂತನ ಮನೆ ನಿರ್ಮಿಸಿಕೊಡಬೇಕು. ಕಾಫಿ ಸೇರಿದಂತೆ ಎಲ್ಲಾ ಬೆಳೆಗಳು ನಾಶವಾಗಿದ್ದು, ಸರ್ಕಾರ ಬೆಳೆ ಪರಿಹಾರವನ್ನು ಶೀಘ್ರ ನೀಡಬೇಕು. ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಭಾರೀ ಗಾಳಿಮಳೆಯಿಂದ ಹೆಚ್ಚಿನ ವಿದ್ಯುತ್ ಕಂಬಗಳು ಬಿದ್ದು, ವಿದ್ಯುತ್ ಮಾರ್ಗಗಳಿಗೆ ಹಾನಿಯಾಗಿದೆ. ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಇಲ್ಲದಾಗಿದೆ. ಕೊಡಗು ಜಿಲ್ಲೆಗೆ ಹೆಚ್ಚುವರಿ ವಿದ್ಯುತ್ ಸಿಬ್ಬಂದಿಗಳನ್ನು ನೇಮಕ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಮಳೆಹಾನಿಯಿಂದ ಬಡವರು ಸಂಕಷ್ಟದಲ್ಲಿರುವುದರಿಂದ ಮೈಕ್ರೋ ಫೈನಾನ್ಸ್ ಗಳು ಕಿರುಕುಳ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದರು. ಕುಟ್ಟ, ಶ್ರೀಮಂಗಲ, ಕಕ್ಕಬ್ಬೆ, ಮಾದಾಪುರ, ಶಾಂತಳ್ಳಿ, ತೋಳೂರು ಶೆಟ್ಟಳ್ಳಿ, ಮಂಗಳೂರು ರಸ್ತೆ ಸೇರಿದಂತೆ ವಿವಿಧೆಡೆಯ ಮಳೆಹಾನಿ ಪ್ರದೇಶಗಳನ್ನು ಡಾ.ಅಶ್ವಥ್ ನಾರಾಯಣ್ ಪರಿಶೀಲಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಬಿಜೆಪಿ ಮಹಿಳಾ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಸುವಿನ್ ಗಣಪತಿ, ನಾಗೇಶ್ ಕುಂದಲ್ಪಾಡಿ ಮತ್ತಿತರರು ಹಾಜರಿದ್ದರು.