ಮಡಿಕೇರಿ ಆ.5 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ. ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಅವರು ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು. ಹತ್ತಿರದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿ ಪ್ರಾಕೃತಿಕ ವಿಕೋಪದ ದುರಂತ ಎಲ್ಲಿಯೂ ಮರುಕಳುಹಿಸಬಾರದು. ಜನ ಜಾನುವಾರುಗಳ ರಕ್ಷಣೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗದಂತೆ ಮುನ್ನೆಚ್ಚರವಹಿಸುವುದು ಅತ್ಯಗತ್ಯವಾಗಿದೆ ಎಂದು ಅವರು ತಿಳಿಸಿದರು. ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿ, ಜಲಾಶಯ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿದವು. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಾಗಿದೆ. ಆದ್ದರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕಿದೆ ಎಂದರು. ಕಾಳಜಿ/ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬರದಂತೆ ಗಮನಹರಿಸುವುದು ಅತ್ಯಂತ ಹೆಚ್ಚಿನ ಅಗತ್ಯ ಎಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಮಳೆ ಹಾನಿ ತಕ್ಷಣದ ಕಾರ್ಯಗಳಿಗೆ ಗ್ರಾ.ಪಂ ನಿಂದ ಹಣ ಬಿಡುಗಡೆ ಮಾಡಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವಂತೆ ತಾ.ಪಂ.ಇಒಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಶಾಲೆಗಳು, ಅಂಗನವಾಡಿ ಕಟ್ಟಡಗಳು, ಸರ್ಕಾರಿ ಕಟ್ಟಡಗಳು ಹೀಗೆ ಮಳೆ ಹಾನಿ ಸಂಬಂಧ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ಸದಾ ಕೈಜೋಡಿಸಲಿದೆ. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಪೊಲೀಸ್ ಇಲಾಖೆಯು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜತೆ ಸಹಕರಿಸಲಿದೆ ಎಂದರು. ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಾ.ಪಂ.ಮತ್ತು ಗ್ರಾ.ಪಂ.ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಜಿಲ್ಲಾಡಳಿತದ ನಿರ್ದೇಶನದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ತಹಶೀಲ್ದಾರರು, ಎಂಜಿನಿಯರ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.