ಕುಶಾಲನಗರ ಆ.8 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭ ರಾಜ್ಯದ ಎಲ್ಲೆಡೆ ಸುಮಾರು 17 ಸಾವಿರ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಕ್ರಮ ಇಂದಿನಿಂದ ಆ.8 ರಿಂದ ಒಂದು ವಾರ ತನಕ ನಡೆಯಲಿದೆ. ಮಾನಸಿಕ ನೆಮ್ಮದಿ ಶಾಂತಿಗಾಗಿ ಜನರು ಶ್ರದ್ಧಾ ಕೇಂದ್ರಗಳಿಗೆ ಆಗಮಿಸುತ್ತಿದ್ದು, ಅಂತಹ ಕೇಂದ್ರಗಳು ಗ್ರಾಮದ ಅತಿ ಮುಖ್ಯ ಭಾಗವಾಗಿದ್ದು ಅವುಗಳ ಸ್ವಚ್ಛತೆ ಅತಿ ಅಗತ್ಯವಾಗಿದೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ ಹೆಗ್ಗಡೆ ಅವರ ಚಿಂತನೆಯಾಗಿದೆ. ವರ್ಷದಲ್ಲಿ ಎರಡು ಬಾರಿ ಮಕರ ಸಂಕ್ರಾಂತಿ ಮತ್ತು ಸ್ವಾತಂತ್ರ್ಯೋತ್ಸವ ಸಂದರ್ಭ ಸಪ್ತಾಹದ ಮೂಲಕ ಶ್ರದ್ಧಾ ಕೇಂದ್ರಗಳಾದ ದೇವಾಲಯ ಬಸದಿ ಮಸೀದಿ ಚರ್ಚ್ ಗಳ ಮತ್ತು ನದಿ ತಟಗಳ ಸ್ವಚ್ಛತೆಯನ್ನು ಕೈಗೊಳ್ಳುವ ಮೂಲಕ ಸ್ವಚ್ಛತಾ ಸಂದೇಶ ಸಾರುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಲೀಲಾವತಿ ಹೇಳಿದರು.ರಾಜ್ಯದಲ್ಲಿ ಸುಮಾರು 4 ಲಕ್ಷ ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು ಜನ ಜಾಗೃತಿ ವೇದಿಕೆ ಸದಸ್ಯರು, ನವ ಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು ಮತ್ತು ಊರಿನ ಪ್ರಮುಖರನ್ನು ಸೇರಿಸಿಕೊಂಡು ರಾಜ್ಯದಾದ್ಯಂತ ಈ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ನಡೆಯುವ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.










