ಮಡಿಕೇರಿ NEWS DESK ಆ.8 : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಪಪ್ರಚಾರ ಮಾಡುವ ಮೂಲಕ ರಾಜಕೀಯ ಪಿತೂರಿ ನಡೆಸುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ಜಿಲ್ಲಾ ಕುರುಬ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದವು. ಸಂಘಟನೆಗಳ ಪ್ರಮುಖರು ಹಾಗೂ ನೂರಾರು ಕಾರ್ಯಕರ್ತರು ಪ್ರವಾಸಿ ಮಂದಿರದ ಬಳಿಯಿಂದ ಫೀ.ಮಾ.ಕಾರ್ಯಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದÀರು. ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ರಾಜ್ಯದ ಬಡವರು ಹಾಗೂ ಅವಕಾಶ ವಂಚಿತ ಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ನೆರವು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆಧಾರ ರಹಿತ ಆರೋಪಗಳನ್ನು ಮಾಡುತ್ತಿವೆ. ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನದಲ್ಲಿ ತೊಡಗಿವೆ ಎಂದರು. ದಕ್ಷ ಆಡಳಿತಗಾಗರ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಷಡ್ಯಂತ್ರ ನಡೆಯುತ್ತಿದೆ. ಆದರೆ ಕಾನೂನಾತ್ಮಕ ಹೋರಾಟ ನಡೆಸುವ ಮೂಲಕ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಶಕ್ತಿ ತುಂಬುತ್ತೇವೆ ಮತ್ತು ಸತ್ಯವನ್ನು ರಾಜ್ಯದ ಜನರ ಮುಂದಿಡುತ್ತೇವೆ ಎಂದು ಹೇಳಿದರು. ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಶಕ್ತಿಯಾಗಿ ಬೆಳೆದಿದ್ದಾರೆ. ಈ ಶಕ್ತಿಯನ್ನು ಧಮನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶೋಷಿತ ವರ್ಗಗಳ ಧ್ಚನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ಮತ್ತು ಧ್ವನಿ ಅಡಗಿಸಲು ವಿರೋಧ ಪಕ್ಷಗಳು ಪಿತೂರಿ ನಡೆಸುತ್ತಿವೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕುತಂತ್ರ ನಡೆಯುತ್ತಿದ್ದು, ಇದರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು. ಅಹಿಂದ ಒಕ್ಕೂಟದ ಜಿಲ್ಲಾ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸಮಾಜದ ಕಟ್ಟ ಕಡೆಯ ಜನರಿಗೂ ಸಾಮಾಜಿಕ ನ್ಯಾಯ ದಕ್ಕಬೇಕು ಎಂಬುವುದು ಸಿದ್ದರಾಮಯ್ಯ ಅವರ ನಿಲುವು. ಆದರೆ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ನಾಟಕವಾಡುತ್ತಿದ್ದಾರೆ. ಈ ಕುರಿತು ಜನರಿಗೆ ಸತ್ಯ ತಿಳಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ತಪ್ಪು ಸಂದೇಶ ಹರಡುತ್ತಿರುವ ವಿರೋಧ ಪಕ್ಷಗಳ ವರ್ತನೆಗೆ ಸಮಾಜದಲ್ಲಿ ವ್ಯಾಪಕ ವಿರೋಧ ವ್ಯಕ್ಯವಾಗುತ್ತಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯ ಮಾಜಿ ಸದಸ್ಯ ಅರುಣ್ ಮಾಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಜಿಲ್ಲಾ ಕ್ರೈಸ್ತ ಸಂಘದ ಅಧ್ಯಕ್ಷ ಕೆ.ಟಿ.ಬೇಬಿಮ್ಯಾಥ್ಯು, ಕೆಪಿಸಿಸಿ ಕಾರ್ಯದರ್ಶಿ ಎಚ್.ಕೆ.ನಟೇಶ್ ಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಟಿ.ಪಿ.ಹಮೀದ್, ಸುನಿತ, ಪೃಥ್ವಿ, ಶೈಲಾ ಕುಟ್ಟಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










