ವಿರಾಜಪೇಟೆ NEWS DESK ಆ.12 : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ವಿರಾಜಪೇಟೆ ಗಡಿಯಾರ ಕಂಬದ ಬಳಿ ಹಿಂದೂ ಹಿತರಕ್ಷಣಾ ಸಮಿತಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿತು. ಹಿಂದುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಹಿಂದುಗಳಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕೆಂದು ಆಗ್ರಹಿಸಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಹಿಂದುಗಳಿಗೆ ಭದ್ರತೆ ಇಲ್ಲದಾಗಿದೆ, ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದೆ. ಬಹುಸಂಖ್ಯಾತರಿಂದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ, ಕಿರುಕುಳ ಹಾಗೂ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿ ಅಲ್ಲಿನ ಹಿಂದೂಗಳ ರಕ್ಷಣೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು. ಹಿಂದೂ ಸಂಘಟನೆಗಳ ಪ್ರಮುಖರಾದ ಕುಟ್ಟಂಡ ಪ್ರಿನ್ಸ್ ಗಣಪತಿ, ವಿವೇಕ್ ರೈ, ಹೇಮಂತ್, ಭಾಜಪ ಮುಖಂಡರಾದ ಸುವಿನ್ ಗಣಪತಿ, ಶಶಿ ಸುಬ್ರಮಣಿ, ಪಟ್ರಪಂಡ ರಘು ನಾಣಯ್ಯ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.