ಮಡಿಕೇರಿ ಆ.14 NEWS DESK : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡವು. ಹರ್ ಘರ್ ತಿರಂಗಾ ಅಭಿಯಾನ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಶಾಲಾ ಕಾಲೇಜುಗಳಲ್ಲಿ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಹಾಗೆಯೇ ಕಾಲ್ನಾಡಿಗೆ ಜಾಥಾ ಕಾರ್ಯಕ್ರಮಗಳು ಜಿಲ್ಲೆಯ ವಿವಿಧ ಭಾಗಗಳಲ್ಲಿ ಜರುಗಲಿವೆ ಎಂದು ತಿಳಿಸಿದರು. ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ದಿಸೆಯಲ್ಲಿ ರಾಜಾಸೀಟು, ಅಬ್ಬಿ ಜಲಪಾತ, ದುಬಾರೆ ಮತ್ತಿತರ ಪ್ರವಾಸಿ ಸ್ಥಳಗಳಲ್ಲಿ ಸೆಲ್ಫಿ ಪಾಯಿಂಟ್ ತೆಗೆದು ಅಪ್‍ಲೋಡ್ ಮಾಡುವಂತಾಗಬೇಕು. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲರೂ ತಮ್ಮ ಸೆಲ್ಫಿಗಳನ್ನು https://hargartiranga.com ನಲ್ಲಿ ಹಂಚಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮದಂತೆ ವೈವಿಧ್ಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು. ಶಾಲಾ-ಕಾಲೇಜುಗಳಲ್ಲಿ, ವಸತಿ ಶಾಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಉಪ ವಿಭಾಗಾಧಿಕಾರಿ ಹಾಗೂ ಹರ್ ಘರ್ ತಿರಂಗಾ ಅಭಿಯಾನದ ನೋಡಲ್ ಅಧಿಕಾರಿ ವಿನಾಯಕ ನರ್ವಾಡೆ ಅವರು ಮಾತನಾಡಿ ಈಗಾಗಲೇ ಶಾಲಾ-ಕಾಲೇಜು ಹಾಗೂ ಐತಿಹಾಸಿಕ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತಾ.ಪಂ.ಇಒ ಶೇಖರ್ ಅವರು ಗ್ರಾ.ಪಂ.ಮಟ್ಟದಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆಯುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಶ್ರಮಿಸಲಾಗಿದೆ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ವಿಶಾಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ವಿಜಯ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ತಹಶೀಲ್ದಾರರು, ತಾ.ಪಂ.ಇಒಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಸತಿ ಶಾಲೆಯ ಪ್ರಾಂಶುಪಾಲರು, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಇತರರು ಇದ್ದರು.