ಮಡಿಕೇರಿ ಆ.14 NEWS DESK : ಇದೇ ಆಗಸ್ಟ್, 19 ರಂದು ನುಲಿಯ ಚಂದಯ್ಯ, ಆ.20 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಮತ್ತು ಶ್ರೀ ನಾರಾಯಣ ಗುರು ಜಯಂತಿ ಹಾಗೂ ಆ.26 ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಗಸ್ಟ್, 20 ರಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ನಗರದ ಗಾಂಧಿಭವನದಲ್ಲಿ ಆಚರಿಸಲು ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಹೊನ್ನೇಗೌಡ ಅವರು ಡಿ.ದೇವರಾಜ ಅರಸು ಅವರ ಜಯಂತಿಯನ್ನು ಕಳೆದ ಬಾರಿಯಂತೆ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಅರಸು ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಎಲ್ಲರೂ ಸಹಕರಿಸುವಂತೆ ಕೋರಿದರು. ಪ್ರಮುಖರಾದ ಮನು ಮೇದಪ್ಪ ಅವರು ಮಾತನಾಡಿ ಕೊಡಗು ಜಿಲ್ಲೆಯ ಎಲ್ಲಾ ಸಮಾಜದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಯಶಸ್ಸುಗೊಳಿಸುವಂತೆ ಸಲಹೆ ಮಾಡಿದರು. ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿನ ಕಾರ್ಯಕ್ರಮಗಳ ಬಗ್ಗೆ ಬೆಳಕು ಚೆಲ್ಲುವಂತಾಗಬೇಕು ಎಂದು ಮನವಿ ಮಾಡಿದರು. ಅಹಿಂದ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಮುದ್ದಯ್ಯ ಅವರು ಮಾತನಾಡಿ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಣ್ಣ ಮತ್ತು ಅತೀ ಸಣ್ಣ ಸಮಾಜಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದು, ಅವರನ್ನು ಸದಾ ಸ್ಮರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಅರಸು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆಗೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.
ಡಿ.ದೇವರಾಜು ಅರಸು ಅವರ ಅವಧಿಯಲ್ಲಿನ ಯೋಜನೆಗಳು, ಕಾರ್ಯಕ್ರಮಗಳ ಸಂಬಂಧ ಉಪನ್ಯಾಸಕರನ್ನು ಆಹ್ವಾನಿಸಲು ಅಗತ್ಯ ಸಲಹೆ ನೀಡುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. ಶ್ರೀ ನಾರಾಯಣ ಗುರು ಜಯಂತಿ ಸಂಬಂಧ ಮಾಹಿತಿ ನೀಡಿದ ಪ್ರಮುಖರಾದ ವಿ.ಕೆ.ಲೋಕೇಶ್ ಅವರು ಎಸ್‍ಎನ್‍ಡಿಪಿ ವತಿಯಿಂದ ಹಲವು ದಶಕಗಳಿಂದ ಸಿದ್ದಾಪುರದಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಿಕೊಂಡು ಬರಲಾಗಿದ್ದು, ಸುಮಾರು 3 ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತವು ಸಹ ಕೈಜೋಡಿಸುವಂತಾಗಬೇಕು ಎಂದು ಕೋರಿದರು. ನಾರಾಯಣ ಗುರು ಜನ್ಮ ದಿನಾಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲಾಡಳಿತ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ನಡೆಸುವಂತೆ ಸಲಹೆ ಮಾಡಿದರು. ಶ್ರೀಕೃಷ್ಣ ಜನ್ಮಾಷ್ಠಮಿ ಸಂಬಂಧಿಸಿದಂತೆ ಮಾತನಾಡಿದ ನಗರದ ಶ್ರೀ ಕಂಚಿಕಾಮಾಕ್ಷಿ ದೇವಾಲಯದ ಗೌರವ ಅಧ್ಯಕ್ಷರಾದ ಜಿ.ವಿ.ರವಿಕುಮಾರ್ ಅವರು ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಗೌಳಿ ಸಮುದಾಯವು ಹಲವು ದಶಕಗಳಿಂದ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಜಿಲ್ಲಾಡಳಿತ ವತಿಯಿಂದ ದೇವಾಲಯ ಬಳಿ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸಹಕಾರಕ್ಕೆ ಮನವಿ ಮಾಡಿದರು. ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಕ್ಕಳಿಗೆ ಛದ್ಮವೇಷ, ಮೊಸರು ಕುಡಿಕೆ ಒಡೆಯುವುದು, ಮಕ್ಕಳಿಂದ ಶ್ರೀಕೃಷ್ಣ ನೃತ್ಯ ಪ್ರದರ್ಶನ ಹೀಗೆ ಹಲವು ಕಾರ್ಯಕ್ರಮಗಳನ್ನು ದೇವಾಲಯದ ಬಳಿ ಆಯೋಜಿಸಲಾಗುತ್ತಿದ್ದು, ಈ ಹಿಂದಿನಂತೆಯೇ ಜಿಲ್ಲಾಡಳಿತ ಕೈಜೋಡಿಸುವಂತೆ ಮನವಿ ಮಾಡಿದರು. ಆ.25 ರ ರಾತ್ರಿ ವೇಳೆ ಕಂಚಿಕಾಮಾಕ್ಷಿ ದೇವಾಲಯದಲ್ಲಿ ಸಾಂಪ್ರದಾಯಿಕ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ರವಿಕುಮಾರ್ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಾತ್ರಿ ವೇಳೆ ಕಾರ್ಯಕ್ರಮ ನಡೆಯುವ ಸಂಬಂಧ ಪೊಲೀಸ್ ಇಲಾಖೆ ಅನುಮತಿ ಪಡೆಯುವಂತೆ ಸಲಹೆ ಮಾಡಿದರು. ದೇವಾಲಯ ಸಮಿತಿಯ ಜಿ.ಬಿ.ಪವನ್, ಉಪಾಧ್ಯಕ್ಷರಾದ ಜಿ.ಸಿ.ಜಗದೀಶ್, ಗೌರವ ಅಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ, ಜಿ.ಸಿ.ಮನೋಜ್, ಜಿ.ಎಸ್.ಮನೋಜ್, ಜಿ.ಎಲ್.ದಾಸ ಇತರರು ಇದ್ದರು. ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಸಮಾಜದ ಪ್ರಮುಖರ ಜೊತೆ ಚರ್ಚಿಸಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಒಟ್ಟಾರೆ ಎಲ್ಲಾ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿವಿಧ ಜಯಂತಿಗಳಿಗೆ ಎಲ್ಲಾ ಮುಖಂಡರು ಮತ್ತು ಸಂಘ ಸಂಸ್ಥೆಗಳು ಕಾರ್ಯಕ್ರಮಕ್ಕೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಗಿರೀಶ್, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು.