ವಿರಾಜಪೇಟೆ ಆ.19 NEWS DESK : ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಯಶಸ್ವಿ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅಸಂವಿಧಾನಿಕ ನಡೆಯಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ.ಹನೀಫ್ ದೂರಿದ್ದಾರೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರದ ಭಾಗವಾಗಿದೆ. ರಾಜ್ಯ ಕಂಡ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಹಾಗೂ ದೇಶದ ಶ್ರೇಷ್ಠ ಅಹಿಂದ ನೇತಾರರಾದ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ರಾಜಕಾರಣಿಯಾಗಿ ಕೀಳುಮಟ್ಟಕ್ಕೆ ಇಳಿದಿದ್ದು ನಿಜಕ್ಕೂ ಖಂಡನೀಯ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರದ ದ್ವೇಷ ಸಾಧನೆಗೆ ಮುಂದಾಗಿರುವುದು ಅವರ ಹತಾಶೆಯನ್ನು ಎತ್ತಿ ತೋರಿಸುತ್ತದೆ ಎಂದು ತಿಳಿಸಿದ್ದಾರೆ. 40 ವರ್ಷಗಳ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಬದುಕಿದ ನಾಯಕರಾದ ಸಿದ್ದರಾಮಯ್ಯ ಅವರ ಯಶಸ್ಸು ಸಹಿಸದ ಕೇಂದ್ರದ ಬಿಜೆಪಿ ಸರ್ಕಾರ ಅತ್ಯಂತ ನೀಚತನಕ್ಕೆ ಇಳಿದಿದೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಹನೀಫ್, ಸಿದ್ದರಾಮಯ್ಯ ಅವರು ತಮ್ಮ ಕುಟುಂಬದವರನ್ನು ಕೂಡ ಅಕ್ಕಪಕ್ಕ ಸೇರಿಸದೆ ಆಡಳಿತ ಮಾಡುತ್ತಿದ್ದಾರೆ. ಹೀಗಿದ್ದರೂ ಸಿದ್ದರಾಮಯ್ಯ ಅವರು ಕಾನೂನನ್ನು ಉಲ್ಲಂಘಿಸುತ್ತಾರೆಯೇ ಎಂದು ಪ್ರಶ್ನಿಸಿದರು. ಬಿಜೆಪಿಯವರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಆಗದೇ ಇರೋ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ನಡೆಯುತ್ತಿದೆ. ಇಂತಹ ಷಡ್ಯಂತ್ರವನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದ್ದು, ಜನ ಸಂಘಟನೆಯ ಮೂಲಕ ಬಿಜೆಪಿಗೆ ಸೂಕ್ತ ಉತ್ತರವನ್ನು ನೀಡಲಾಗುವುದು. ಇದೀಗ ರಾಜ್ಯಾದ್ಯಂತ ಸಿದ್ದರಾಮಯ್ಯ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ರಾಜ್ಯಪಾಲರ ಅಸಂವಿಧಾನಿಕ ನಡೆಯ ವಿರುದ್ಧ ಇದೀಗ ನಡೆಯುತ್ತಿರುವ ಹೋರಾಟಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಪೂರ್ಣ ಬೆಂಬಲ ನೀಡಲಿದೆ. ಜೊತೆಗೆ ಸಿದ್ದರಾಮಯ್ಯ ಅವರಿಗೆ ಸದಾ ನೈತಿಕ ಬೆಂಬಲ ನೀಡಲಾಗುವುದು ಎಂದು ಹನೀಫ್ ತಿಳಿಸಿದರು. ಜನಪರವಾದ ಆಡಳಿತ ನೀಡುತ್ತಾ, ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಕುಗ್ಗಿಸಲು ಬಿಜೆಪಿ ನಿರಂತರವಾಗಿ ಶ್ರಮಿಸುತ್ತಿದೆ. ಇದರ ಒಂದು ಭಾಗವಾಗಿಯೇ ಇತ್ತೀಚಿಗೆ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಬಿಜೆಪಿಯವರ ಈ ಷಡ್ಯಂತ್ರಕ್ಕೆ ಜೆಡಿಎಸ್ ಪಕ್ಷ ಕೂಡ ಕೈಜೋಡಿಸಿರುವುದು ತೀರಾ ನಾಚಿಕೆಗೇಡಿನ ವಿಚಾರವಾಗಿದೆ. ಕರ್ನಾಟಕದಲ್ಲಿ ಎರಡು ಬಾರಿ ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ರಾಜ್ಯದ ಜನತೆ ಇದನ್ನು ಕ್ಷಮಿಸುವುದಿಲ್ಲ ಎಂದು ಹೇಳಿರುವ ಹನೀಫ್, ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಕೇಂದ್ರ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯವಾಗಿದೆ. ರಾಜ್ಯಪಾಲರು ರಾಜ್ಯಪಾಲನೆ ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯಪಾಲರು ಅನುಸರಿಸಿರುವ ಈ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವೇ ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಘಟಕದ ಉಪಾಧ್ಯಕ್ಷರಾದ ಎಂ.ಎಂ.ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಕೆ.ಎಂ.ಸೈಯದ್ ಭಾವ, ವಿವಿಧ ಬ್ಲಾಕ್ ಘಟಕದ ಅಧ್ಯಕ್ಷರಾದ ಅಕ್ಮಲ್ ಪಾಷಾ, ಕೋಳುಮಂಡ ರಫೀಕ್, ಸಿ.ಎ.ಜುನೈದ್ ಉಪಸ್ಥಿತರಿದ್ದರು.
Breaking News
- *ಕುಶಾಲನಗರ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ*
- *ನ.17 ರಂದು ಎಲ್ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯಲ್ಲಿ ಚಿತ್ರಕಲಾ ಸ್ಪರ್ಧೆ*
- *ಮಿನಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಕೊಡಗು ಮರ್ಕರ ಟೆಕ್ವಾಂಡೋ ಕ್ಲಬ್ನ ವಿದ್ಯಾರ್ಥಿಗಳು ಆಯ್ಕೆ*
- *ಅರೆಕಾಡಿನಲ್ಲಿ ಗಮನ ಸೆಳೆದ ‘ನಾಡೊರ್ಮೆ’ ಕಾರ್ಯಕ್ರಮ : ಕೊಡವ ಸಂಸ್ಕೃತಿ-ಸಾಹಿತ್ಯ ಬೆಳವಣಿಗೆಗೆ ಮತ್ತಷ್ಟು ಶ್ರಮಿಸಿ : ಶಾಸಕ ಡಾ.ಮಂತರ್ ಗೌಡ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*
- *”ಜೇಡ್ಲ ಗೋಕುಲ ತಿಲಕ” ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕುಶಾಲನಗರ- ಶ್ರೀರಂಗಪಟ್ಟಣ ರಸ್ತೆ ಕಾಮಗಾರಿ ಶೀಘ್ರ ಪೂರ್ಣ : ಸಂಸದ ಯದುವೀರ್ ಭರವಸೆ*
- *ಹಾಕತ್ತೂರು, ಮೇಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಂಸದ ಯದುವೀರ್*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನಾಪೋಕ್ಲು : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ*