ಮಡಿಕೇರಿ NEWS DESK ಆ.20 : ಮೂಡ ಪ್ರಕರಣ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪವನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಹೆಸರಿನಲ್ಲಿ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಯಡಿಯೂರಪ್ಪ ಅವರ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದಾಗ ಸ್ವಾಗತ ಮಾಡಿದ್ದ ಸಿದ್ದರಾಮಯ್ಯ ಅವರು ಇದೀಗ ತಮ್ಮ ವಿಚಾರದಲ್ಲಿ ರಾಜ್ಯಪಾಲರು ತೆಗೆದುಕೊಂಡ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ, ಆಡಳಿತ ಸಂಪೂರ್ಣ ವಿಫಲವಾಗಿದೆ. ಮಳೆಹಾನಿ ನಿರ್ವಹಣೆಗೆ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಪ್ರತಿ ಪಂಚಾಯ್ತಿಗೆ 50 ಸಾವಿರದಿಂದ ಒಂದು ಲಕ್ಷದ ವರೆಗೆ ಹಣ ನೀಡಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಅನುದಾನವನ್ನೇ ನೀಡುತ್ತಿಲ್ಲ. ನ್ಯಾಯಬೆಲೆ ಅಂಗಡಿಗಳಿಗೆ ಕಮಿಷನ್ ನ್ನು ಕೂಡ ಬಿಡುಗಡೆ ಮಾಡಿಲ್ಲ. ಇದನ್ನೆಲ್ಲ ಗಮನಿಸಿದರೆ ಸರ್ಕಾರ ದಿವಾಳಿಯಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಟೀಕಿಸಿದ ಕಿಶೋರ್ ಕುಮಾರ್, ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವೆಂದರು.
::: ಪ್ರತಿಭಟನೆ :::
ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ಪ್ರತ್ಯುತ್ತರವಾಗಿ ಆ.22 ರಂದು ಜಿಲ್ಲಾ ಬಿಜೆಪಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾವು ನಿರಪರಾಧಿ ಎಂದು ಸಾಬೀತು ಪಡಿಸಲು ಕಾನೂನಿನ ಹೋರಾಟ ಹಾದಿ ಇದ್ದರೂ ಅಹಿಂದ ಸಂಘಟನೆಯನ್ನು ರಕ್ಷಣಾ ಕವಚವನ್ನಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದಿನ ಒಂದು ಪ್ರಕರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ತಕ್ಷಣ ಯಡಿಯೂರಪ್ಪ ಅವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದ್ದರು. ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಅವರು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡುವ ಮೂಲಕ ತಾವೊಬ್ಬ ದಕ್ಷ ರಾಜಕಾರಣಿ ಎನ್ನುವುದನ್ನು ಸಾಬೀತು ಪಡಿಸಬಹುದಾಗಿತ್ತು. ಆದರೆ ಕಾನೂನು ರೀತಿಯಲ್ಲಿ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರನ್ನೇ ಟಾರ್ಗೆಟ್ ಮಾಡಿ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಸಂದರ್ಭ ಬಾಂಗ್ಲಾ ದೇಶದಂತೆ ಭಾರತದಲ್ಲೂ ಆಗುತ್ತದೆ ಎಂದು ದೇಶದ್ರೋಹದ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕೆಂದು ಮಹೇಶ್ ಜೈನ್ ಒತ್ತಾಯಿಸಿದರು. ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಮಾತನಾಡಿ ರಾಜ್ಯ ಸರ್ಕಾರ ಭಾಗ್ಯಗಳ ಹೆಸರಿನಲ್ಲಿ ಜನರಿಗೆ ಕೊಟ್ಟು ಕಿತ್ತುಕೊಳ್ಳುವ ಕಾರ್ಯದಲ್ಲಿ ತೊಡಗಿದೆ ಎಂದು ಟೀಕಿಸಿದರು. ಸರ್ಕಾರದ ಹಗರಣಗಳ ಸರಮಾಲೆಯನ್ನು ಗಮನಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಕೊನೆಯ ಅಧ್ಯಾಯ ಇದು ಎಂದು ಸಾಬೀತಾಗುತ್ತಿದೆ. ಮುಖ್ಯಮಂತ್ರಿಗಳು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ರಾಜೀನಾಮೆ ನೀಡುವ ಮೂಲಕ ತನಿಖೆಗೆ ಸಹಕರಿಸಿ ತಾವೊಬ್ಬ ಪ್ರಾಮಾಣಿಕ ಎಂದು ಸಾಬೀತುಪಡಿಸಲಿ. ನಂತರ ಮತ್ತೆ ಅಧಿಕಾರದಲ್ಲಿ ಮುಂದವರೆಯಲಿ ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.