
ಕುಶಾಲನಗರ ಸೆ.2 NEWS DESK : ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಬೇಕೆಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಕನ್ನಡ ಸಾಹಿತ್ಯ, ಕಲೆ, ಪರಂಪರೆ ಹಾಗೂ ಸಂಸ್ಕೃತಿಗಳನ್ನು ಬೆಳೆಸುವಲ್ಲಿ ಮತ್ತು ವಚನ ಸಾಹಿತ್ಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಗೊ.ರು.ಚನ್ನಬಸಪ್ಪ ಸಾಕಷ್ಟು ಶ್ರಮಿಸಿರುವ ನಾಡು ಕಂಡ ಹಿರಿಯ ಸಾಹಿತಿಯಾಗಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಜನಪದ ಸಾಹಿತ್ಯವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಜಾನಪದ ಪರಿಷತ್ ಅಧ್ಯಕ್ಷರಾಗಿ ದುಡಿದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಷ್ಟ್ರಾಧ್ಯಕ್ಷರಾಗಿಯೂ ಅಪಾರ ಸೇವೆ ಸಲ್ಲಿಸಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರನ್ನು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ಶಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಮೂರ್ತಿ ಒತ್ತಾಯಿಸಿದ್ದಾರೆ.








