ಕುಶಾಲನಗರ ಸೆ.3 NEWS DESK : ಕುಶಾಲನಗರ ಶೈಕ್ಷಣಿಕ ಕ್ಲಸ್ಟರ್ ಕೇಂದ್ರದ ವತಿಯಿಂದ ಕುಶಾಲನಗರ ಪಟ್ಟಣದ ಜ್ಞಾನ ಭಾರತಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲಿಕೋತ್ಸವದಲ್ಲಿ ಮಕ್ಕಳ ಬಹುಮುಖ ಪ್ರತಿಭೆ ಅನಾವರಣಗೊಂಡಿತು. ಶಾಲಾ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಹಾಗೂ ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜ್ಞಾನಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ಎಲ್.ನಾಗರಾಜ್, ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು. ಮಕ್ಕಳಲ್ಲಿ ಉತ್ತಮ ಪ್ರತಿಭೆಯನ್ನು ಅನಾವರಣಗೊಳಿಸಲು ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಮಾತನಾಡಿ, ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಉತ್ತಮ ಅವಕಾಶವನ್ನು ನೀಡುತ್ತದೆ ಎಂದರು. ಚಿತ್ರಕಲಾ ನಿವೃತ್ತ ಶಿಕ್ಷಕ ಉ.ರಾ.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಒದಗಿಸುವ ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳ ಕಲಿಕೆಗೆ ಪ್ರೇರಕ ಶಕ್ತಿಯಾಗಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಟಿ.ಈ.ವಿಶ್ವನಾಥ್, ಮಕ್ಕಳ ಪ್ರತಿಭೆಯ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಡಿ.ಎಲ್. ಚಂದ್ರಕಲಾ, ಶಿಕ್ಷಕರ ಸಂಘಟನೆಯ ಪ್ರಮುಖರಾದ ಎಸ್.ಕೆ.ಸೌಭಾಗ್ಯ ಎಚ್.ಎಸ್.ಉಮಾದೇವಿ, ಮೂಕಾಂಬಿಕಾ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್.ಎಸ್.ಗೋಪಾಲ್, ಗೊಂದಿಬಸವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಕೆ.ಜಲಜಾಕ್ಷಿ, ಸಿ.ಆರ್.ಪಿ.ಗಳಾದ ಟಿ.ಈ. ವಿಶ್ವನಾಥ, ಆಶಾ, ಸೀಮಾ, ಆದರ್ಶ್ , ವೈಶಾಲಿ,
ಸಂಪನ್ಮೂಲ ವ್ಯಕ್ತಿಗಳಾದ ವಸಂತ್, ಎಸ್.ವಿ.ಸಂತೋಷ್ ಕುಮಾರ್, ಎಸ್.ಆರ್.ಶಿವಲಿಂಗ, ಜಂಶೀರ್ ಖಾನ್ ಅಹ್ಮದ್ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು, ಪೋಷಕರು, ನಾಗರಿಕರು ಪಾಲ್ಗೊಂಡಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಅನಾವರಣಗೊಂಡ ಮಕ್ಕಳ ಪ್ರತಿಭಾ ಪ್ರದರ್ಶನ: ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅನಾವರಣಗೊಂಡ ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳು ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಿದರು.



















