ಮಡಿಕೇರಿ ಸೆ.5 NEWS DESK : ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿ.ಪಂ.ಸಿಇಒ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯ ಕಾರ್ಯಪಾಲಕ ಅಭಿಯಂತರರಾದ ಪಿ.ಆರ್. ಸುರೇಶ್ ಕುಮಾರ್ ಅವರು ಜಿಲ್ಲೆ ಹಾಗೂ ತಾಲ್ಲೂಕು ಪ್ರಯೋಗಾಲಯಗಳಿಂದ ಏಪ್ರಿಲ್, 2024 ರಿಂದ ಇಲ್ಲಿಯವರೆಗೆ ನೀರಿನ ಮಾದರಿ ಪರೀಕ್ಷೆಗಳ ವಿವರಣೆ ನೀಡಿದರು. ನೀರಿನ ಮಾದರಿ ಪರೀಕ್ಷೆಗಳಲ್ಲಿ ಕಂಡುಬಂದಿರುವ ರಾಸಾಯನಿಕ ವರದಿಗಳನ್ನು ವಿಸ್ತೃತವಾಗಿ ಮಂಡಿಸಿದ್ದರು. ಹಾಗೆಯೇ ಪಂಚಾಯಿತಿ ಮಟ್ಟದಲ್ಲಿ ಎಫ್‍ಟಿಕೆ ಕಿಟ್ ಉಪಯೋಗಿಸಿಕೊಂಡು ನೀರಿನ ಮಾದರಿಯನ್ನು ಪರೀಕ್ಷಿಸಿ ಶುದ್ಧವಾಗಿರುವ ನೀರನ್ನು ಕುಡಿಯಲು ಪೂರೈಸುವಂತೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಂಬಂಧಿಸಿದಂತೆ ಇಲಾಖೆ ನಿರ್ದೇಶಕರಿಗೆ ಪತ್ರ ಪಡೆದು ಮಾಹಿತಿ ಪಡೆಯುವಂತೆ ಸೂಚಿಸಿದರು. ಜಲಜೀವನ್ ಮಿಷನ್ ಬ್ಯಾಚು ಒಂದು ಯೋಜನೆಯಡಿ ಮಡಿಕೇರಿ ತಾಲ್ಲೂಕಿನಲ್ಲಿ ಕೈಗೊಳ್ಳಬೇಕಿರುವ 28 ಹೊಸ ಕುಡಿಯುವ ನೀರಿನ ಶುದ್ಧೀಕರಣ ಘಟಕ ಪ್ರಸ್ತಾವನೆ ಸಂಬಂಧ ಕಡತ ಮಂಡಿಸುವಂತೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ನಿರ್ದೇಶನ ನೀಡಿದರು. ಜಲಜೀವನ್ ಮಿಷನ್ ಯೋಜನಾ ಮಾಹಿತಿಯ ಫಲಕಗಳ ಅಳವಡಿಕೆಗೆ ದರ ನಿಗಧಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಯೋಗಾಲಯ ವಾರ್ಷಿಕ ಕ್ರೀಯಾಯೋಜನೆ ಅನುಮೋದನೆ ಹಾಗೂ ಪಿಎಂ-ಜನ್‍ಮನ್ ಯೋಜನೆಯಡಿ ಪಿವಿಟಿಜಿ ಜನವಸತಿ ಕಾಮಗಾರಿಗಳಿಗೆ ಜಿ.ಪಂ.ಸಿಇಒ ಅವರು ಅನುಮೋದನೆ ನೀಡಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್ ಅವರು ಕೊಡಗು ಜಿಲ್ಲೆಯ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಕಾರ್ಯಚಟುವಟಿಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಹೊಸದಾಗಿ ಅನುಷ್ಠಾನ ಮಾಡಲು ಉದ್ದೇಶಿಸಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ಸಂಬಂದ ಹಲವು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 1,05,331 ಕುಟುಂಬಗಳಿದ್ದು, ಮಡಿಕೇರಿ ತಾಲ್ಲೂಕಿನಲ್ಲಿ 8,325, ಸೋಮವಾರಪೇಟೆ ತಾಲ್ಲೂಕಿನಲ್ಲಿ 30,930, ಕುಶಾಲನಗರ ತಾಲ್ಲೂಕಿನಲ್ಲಿ 19,388, ವಿರಾಜಪೇಟೆ ತಾಲ್ಲೂಕಿನಲ್ಲಿ 20,496, ಪೊನ್ನಂಪೇಟೆ ತಾಲ್ಲೂಕಿನಲ್ಲಿ 26,192 ಕುಟುಂಬಗಳಿದ್ದು, ಸುಮಾರು 88,535 ಲಕ್ಷಗಳಿಗೆ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಸುರೇಶ್ ಕುಮಾರ್ ವಿವರಿಸಿದರು. ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ.ಮಧುಸೂದನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕೃಷ್ಣಪ್ಪ, ಸಣ್ಣ ನೀರಾವರಿ ಇಲಾಖೆಯ ಅಭಿಯಂತರರು, ಕೃಷಿ ಇಲಾಖೆಯ ಉಪ ನಿರ್ದೇಶಕರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಇತರರು ಇದ್ದರು.