ಮಡಿಕೇರಿ ಸೆ.5 NEWS DESK : ಶಿಕ್ಷಕರು ಮಕ್ಕಳ ಹೃದಯದಲ್ಲಿ ಸದಾ ಇರುತ್ತಾರೆ. ಮಕ್ಕಳ ಮನಸ್ಸಿನಿಂದ ಶಿಕ್ಷಕರನ್ನು ತೆಗೆಯಲು ಸಾಧ್ಯವಿಲ್ಲ. ಆ ದಿಸೆಯಲ್ಲಿ ಶಿಕ್ಷಕರೇ ದೇವರು ಎಂದು ಶಾಸಕ ಡಾ.ಮಂತರ್ ಗೌಡ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದ ಮುಖ್ಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕರು ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತಾರೆ. ಶಿಕ್ಷಕರ ಪ್ರತಿಯೊಂದು ಗುಣವು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವಾಗಿದೆ ಎಂದು ಡಾ.ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಪಡೆದಿರುವುದು ಹಾಗೂ ಗುಣಮಟ್ಟದ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪ್ರೀತಿ ಮತ್ತು ವಿಶ್ವಾಸ ಮೂಡಿಸಿ ಶಿಕ್ಷಣ ನೀಡುವಂತಾಗಬೇಕು. ಶಿಕ್ಷಕರ ವೃತ್ತಿಗೆ ತನ್ನದೇ ಆದ ಗೌರವವಿದ್ದು, ಪ್ರತಿಯೊಬ್ಬರೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸದಾ ಸ್ಮರಿಸುತ್ತಾರೆ ಎಂದು ವಿವರಿಸಿದರು. ಶಿಕ್ಷಕರ ವೃತ್ತಿಯು ಹೆಚ್ಚಿನ ಜವಾಬ್ದಾರಿ ಹೊಂದಿದೆ. ಆ ದಿಸೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕೊಡಗು ಜಿಲ್ಲೆಯನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶಿಕ್ಷಕರು ಸೇರಿದಂತೆ ಎಲ್ಲರೂ ಶ್ರಮಿಸಬೇಕಿದೆ ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 7ನೇ ಪರಿಸ್ಕೃತ ವೇತನದಡಿ ವೇತನ ಹೆಚ್ಚಳ ಮಾಡಿದೆ. ಹಾಗೆಯೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಬಡ್ತಿ ಸಂಬಂಧ ಹಲವು ಮಹತ್ತರ ಬದಲಾವಣೆಗೆ ಮುಂದಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಪ್ರತಿಯೊಂದು ಕ್ಷೇತ್ರದಲ್ಲೂ ಬದಲಾವಣೆ ಮತ್ತು ಸುಧಾರಣೆಗೆ ಪ್ರಯತ್ನಿಸಿದೆ ಎಂದು ಹೇಳಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಮಕ್ಕಳ ಮೇಲೆ ಶಿಕ್ಷಕರು ಹೆಚ್ಚಿನ ಪ್ರಭಾವ ಮತ್ತು ಪರಿಣಾಮ ಬೀರುತ್ತಾರೆ. ಆ ನಿಟ್ಟಿನಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಪ್ರತಿಪಾದಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಅನ್ನದಾನ ಮತ್ತು ವಿದ್ಯಾದಾನ ಮಹತ್ತರವಾಗಿದ್ದು, ವಿದ್ಯಾದಾನ ಮಾಡುತ್ತಿರುವ ಶಿಕ್ಷಕರ ವೃತ್ತಿಯು ಹೆಚ್ಚಿನ ಮೌಲ್ಯ ಹೊಂದಿದೆ ಎಂದು ತಿಳಿಸಿದರು. ಅಜ್ಞಾನದಿಂದ ಸುಜ್ಞಾನದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ ಮಾರ್ಗದರ್ಶನ ತೋರುವುದೇ ಶಿಕ್ಷಕರ ವೃತ್ತಿಯಾಗಿದೆ. ಪ್ರತಿಯೊಬ್ಬರೂ ಗುರುಗಳನ್ನು ಸದಾ ಸ್ಮರಿಸುತ್ತಾರೆ. ಮಕ್ಕಳ ಜೀವನ ರೂಪಿಸುವವರು ಶಿಕ್ಷಕರು ಆಗಿದ್ದಾರೆ ಎಂದರು. ಮೈಸೂರಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ನೀಲಗಿರಿ ಎಂ.ತಳವಾರ್ ಮಾತನಾಡಿ ಶಿಕ್ಷಕರ ನಿಜವಾದ ಆಸ್ತಿ ವಿದ್ಯಾರ್ಥಿಗಳು, ಮಹಾನ್ ಕಾರ್ಯ ಮಾಡುವವರು ಮಾತ್ರ ದೊಡ್ಡವರಲ್ಲ, ಮಹಾನ್ ಕಾರ್ಯ ಮಾಡಲು ಪ್ರೇರೇಪಿಸುವ ಶಿಕ್ಷಕರು ಕೂಡ ಮಹಾತ್ಮರು ಎಂದರೆ ತಪ್ಪಾಗಲಾರದು ಎಂದರು. ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಿ, ಕಟ್ಟುನಿಟ್ಟಿನ ಜೀವನ ಶೈಲಿಯಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾಹಿತಿ ಮಾರ್ಗದರ್ಶನ ನೀಡುವಂತಾಗಬೇಕು ಎಂದರು.
ಜಗತ್ತನ್ನು ಬದಲಾಯಿಸಬಲ್ಲ ಶಕ್ತಿಶಾಲಿ ಸಾಧನ ಎಂದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳು ಮೊಬೈಲ್ ದಾಸ್ಯ ಬಿಟ್ಟು ಪುಸ್ತಕ ಓದುವ ಕಡೆ ಗಮನಹರಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಡಿವೈಎಸ್‍ಪಿ ಮಹೇಶ್ ಕುಮಾರ್, ಕೂಡಿಗೆ ಡಯಟ್‍ನ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಶಿಕ್ಷಣಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಎಂ.ಮಹದೇವಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ರಾಜ್ಯ ಸರ್ಕಾರಿ ನೌಕರರ ಕೊಡಗು ಜಿಲ್ಲಾ ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಪದವಿ ಪೂರ್ವ ಕಾಲೇಜು ಜಿಲ್ಲಾ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ, ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಫಿಲೀಪ್ ವಾಸು, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಪಿ.ಗುರುರಾಜ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಚ್.ಎನ್.ಮಂಜುನಾಥ್, ಅನುದಾನಿತ ಪ್ರೌಢಶಾಲಾ ಶಿಕ್ಷಕರ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪ್ರಭು ಕುಮಾರ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಜಿಲ್ಲಾಧ್ಯಕ್ಷರಾದ ಎಚ್.ಕೆ.ಕುಮಾರ, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಜಿಲ್ಲಾ ಅಧ್ಯಕ್ಷರಾದ ಪಿ.ಎ.ಪ್ರವೀಣ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷರಾದ ಎ.ಸೋಮಯ್ಯ, ಪ್ರಾಥಮಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ.ಟಿ.ಪೂರ್ಣೇಶ್, ಎಸ್‍ಸಿಎಸ್‍ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪಾರ್ವತಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಪಿ.ಎಸ್.ರವಿಕೃಷ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಮೋಹನ್ ಪೆರಾಜೆ, ಅನುದಾನಿತ ಪ್ರೌಢಶಾಲಾ ಮತ್ತು ಕಾಲೇಜು ನೌಕರರ ಸಂಘದ ಅಧ್ಯಕ್ಷರಾದ ಕೆ.ಶಿವಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಕಿರಣ್ ಪಿ.ಎಂ., ದೈಹಿಕ ಶಿಕ್ಷಣ ಶಿಕ್ಷಕರದ ಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಜಿ.ಅಶೋಕ್ ಇತರರು ಇದ್ದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಸ್ವಾಗತಿಸಿದರು, ಕುಮಾರ ನಿರೂಪಿಸಿದರು, ಶಿಕ್ಷಕಿಯರು ನಾಡಗೀತೆ ಮತ್ತು ರೈತಗೀತೆ ಹಾಡಿದರು, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ವಂದಿಸಿದರು.