
ಮಡಿಕೇರಿ ಸೆ.6 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಸೆ.9 ನಾಪೋಕ್ಲು ಮತ್ತು ಸೆ.10ರಂದು ಚೇರಂಬಾಣೆಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಾಪೋಕ್ಲು ಮತ್ತು ಚೇರಂಬಾಣೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್‍ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮೂಲಕ ರೆಸಾಟ್ರ್ಗಳು, ದೈತ್ಯಾಕಾರದ ವಿಲ್ಲಾಗಳು, ಲೇಔಟ್ ಗಳು, ಮನೆಗಳು ಟೌನ್ ಶಿಪ್ ಗಳು, ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಸೇರಿದಂತೆ ವಾಣಜ್ಯ ಉದ್ದೇಶದ ಯೋಜನೆಗಳು ತಯಾರಾಗುತ್ತಿದೆ. ಇದು ಪವಿತ್ರ ಕೊಡವ ಲ್ಯಾಂಡ್ ನ ನಾಶಕ್ಕೆ ಕಾರಣವಾಗಬಹುದು. ಟೌನ್ ಶಿಪ್, ನಗರೀಕರಣ, ವಿಲ್ಲಾ, ರೆಸಾರ್ಟ್‍ಗಳ ನಿರ್ಮಾಣದಿಂದ ಕೊಡಗಿನಲ್ಲಿ ಜನಸಂಖ್ಯೆ ಹೆಚ್ಚಾಗಲಿದ್ದು, ಇದನ್ನು ತಡೆದುಕೊಳ್ಳುವ ಶಕ್ತಿ ಇಲ್ಲಿನ ಭೂಪ್ರದೇಶಕ್ಕೆ, ಭೂದೇವಿಗೆ ಇಲ್ಲವಾದ ಕಾರಣ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.









