ಮಡಿಕೇರಿ ಸೆ.6 NEWS DESK : ಭಾಗಮಂಡಲ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದ್ದು, ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ನುರಿತ ವೈದ್ಯರನ್ನು ನೇಮಕ ಮಾಡದಿದ್ದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಅಯ್ಯಂಗೇರಿ ಘಟಕ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಯ್ಯಂಗೇರಿ ಘಟಕದ ಅಧ್ಯಕ್ಷ ಮುನೀರ್ ಭಾಗಮಂಡಲ ಆಸ್ಪತ್ರೆಯನ್ನು ವೈದ್ಯರು ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಭಾಗಮಂಡಲ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಇದೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಲಂಭಿಸಿದ್ದು, ಕಳೆದ 2 ವರ್ಷಗಳಿಂದ ವೈದ್ಯರಿಲ್ಲದೆ ರೋಗಿಗಳು ಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಚಿಕಿತ್ಸಾ ವಿಭಾಗವನ್ನು ಇಬ್ಬರು ಶುಶ್ರೂಷಕಿಯರು ನಿಭಾಯಿಸುತ್ತಿದ್ದಾರೆ. ವೈದ್ಯರ ಕೊರತೆ ಬಗ್ಗೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ ಎಂದು ಆರೋಪಿಸಿದರು. ಭಾಗಮಂಡಲ ಪುಣ್ಯ ಕ್ಷೇತ್ರವಾಗಿದ್ದು, ದೇಶದ ವಿವಿಧ ಕಡೆಗಳಿಂದ ಭಕ್ತರು ಹಾಗೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಸ್ಪಂದಿಸಬೇಕಾದ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದಿರುವುದು ಆಡಳಿತ ವ್ಯವಸ್ಥೆಯ ದೌರ್ಬಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು. ಮುಂದಿನ ಹತ್ತು ದಿನಗಳ ಒಳಗಾಗಿ ಭಾಗಮಂಡಲ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ನುರಿತ ವೈದ್ಯರನ್ನು ನೇಮಕ ಮಾಡದಿದ್ದಲ್ಲಿ ಎಸ್‍ಡಿಪಿಐ ನೇತೃತ್ವದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಉಪಾಧ್ಯಕ್ಷ ಬಿ.ಎ.ಉಸ್ಮಾನ್, ಕಾರ್ಯದರ್ಶಿ ಸಮಾಸ್, ಕೋಶಾಧಿಕಾರಿ ಸಲಾಂ ಹಾಗೂ ಸದಸ್ಯ ಲತೀಫ್ ಉಪಸ್ಥಿತರಿದ್ದರು.