
ಮಡಿಕೇರಿ ಸೆ.13 NEWS DESK : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬೀದರ್‌ನಿಂದ ಚಾಮರಾಜನಗರದವರೆಗೆ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಸರ್ಕಾರಿ ನೌಕರರು ಸಾರ್ವಜನಿಕರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಲ್.ಜನಾರ್ಧನ್ ಹಾಗೂ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಪ್ರಜಾಪ್ರಭತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಮನವರಿಕೆ ಮಾಡಿಕೊಡಲು ಮುಂದಾಗಿದೆ. ಈ ಹಿಂದೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಿಗೆ ಅರಿವಾಗುವಂತೆ “ಸಂವಿಧಾನ ಜಾಥಾ” ಕಾರ್ಯಕ್ರಮ ಮಾಡಿ ಯಶಸ್ವಿಯಾಗಿತ್ತು ಎಂದು ತಿಳಿಸಿದ್ದಾರೆ. ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಹಿನ್ನೆಲೆ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿದರೆ ದೇಶದ ಪ್ರಗತಿ ಸಾಧ್ಯ ಎಂಬ ಘೋಷವಾಕ್ಯದೊಂದಿಗೆ ಬೀದರ್ ನಿಂದ ಚಾಮರಾಜನಗರದವರೆಗೆ ಸುಮಾರು 2500 ಕಿ.ಮೀ ಉದ್ದದ ಮಾನವ ಸರಪಳಿ ರಚಿಸಿ ದಾಖಲೆಯ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ಕೊಡಗು ಜಿಲ್ಲೆಯ ಸಂಪಾಜೆಯಿಂದ ಮಡಿಕೇರಿ, ಕುಶಾಲನಗರ, ಶಿರಂಗಾಲದ ಮೂಲಕ ಮಾನವ ಸರಪಳಿ ರಚಿಸಿ ಯಶಸ್ವಿಗೊಳಿಸಲು ಎಲ್ಲರೂ ಕಾರಣೀಭೂತರಾಗಬೇಕು. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಪಣ ತೊಡಬೇಕು ಎಂದು ಜನಾರ್ಧನ್ ಹಾಗೂ ವೀರೇಂದ್ರ ಕೋರಿದ್ದಾರೆ.








