ಕುಶಾಲನಗರ ಸೆ.18 NEWS DESK : ಮಾನವನ ಉತ್ತಮ ಆರೋಗ್ಯಕ್ಕೆ ಶುದ್ಧ ಗಾಳಿ ಹಾಗೂ ಪರಿಶುದ್ಧ ನೀರು ಅತೀ ಮುಖ್ಯವಾಗಿದ್ದು, ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೂ ಜೋಪಾನಗೊಳಿಸಬೇಕಾದುದು ಎಲ್ಲರ ಕರ್ತವ್ಯ ಎಂದು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ ಹೇಳಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ “ಪರಿಸರ ಮಾಲಿನ್ಯ ತಡೆಗಟ್ಟಲು ಸಾರ್ವಜನಿಕರ ಪಾತ್ರ ” ಎಂಬ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರವ ಕಲುಷಿತವಾಗದಂತೆ ಸ್ವಚ್ಛಂದವಾಗಿ ಇಟ್ಟುಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಲು ಅವರು ಕರೆ ನೀಡಿದರು.
ಆರೋಗ್ಯ ಶಿಕ್ಷಣ ಅಧಿಕಾರಿ ಹೆಚ್.ಕೆ.ಶಾಂತಿ ಈ ಸಂದರ್ಭ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಗಾಳಿ, ನೀರು ಹಾಗೂ ಮಣ್ಣನ್ನು ಸಂರಕ್ಷಿಸಬೇಕೆಂದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಪರಿಸರದ ಜಾಗೃತಿ ಮೂಡಿಸುವ ಸಲುವಾಗಿ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ಸುತ್ತಮುತ್ತ ಪರಿಸರ ಸ್ನೇಹಿ ಗಿಡ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಹಸಿರು ವಲಯವಾಗಿ ಮಾರ್ಪಡಿಸಲಾಗುತ್ತಿದೆ ಎಂದರು. ಶಿಕ್ಷಕಿ ಬಿ.ಡಿ.ರಮ್ಯ, ಆಶಾ ಕಾರ್ಯಕರ್ತೆ ನೇತ್ರಾವತಿ ಇದ್ದರು.