ವಿರಾಜಪೇಟೆ ಸೆ.23 NEWS DESK : ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರಾಜಪೇಟೆ ತಾಲೂಕು ತಾಲ್ಲೂಕು ಸಮಿತಿ ವತಿಯಿಂದ 2023-24 ನೇ ಸಾಲಿನಲ್ಲಿ ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಗೂ ಅತೀ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಮಾತನಾಡಿ, ವಿದ್ಯಾರ್ಥಿಗಳ ಪರೀಕ್ಷಾ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಅಡಗಿದ್ದು ಇನ್ನು ಮುಂದೆಯೂ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕೆಂದರು. ವಿದ್ಯಾರ್ಥಿಗಳು ಚೆನ್ನಾಗಿ ಓದಿ ರಾಷ್ಟ್ರಕ್ಕೆ ಕೊಡುಗೆಯನ್ನು ಕೊಡಬೇಕೆಂದು ಕಿವಿಮಾತು ಹೇಳಿದರು.ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ ಮಾತನಾಡಿ, ಇಂದಿನ ಕಾರ್ಯಕ್ರಮವು ಅರ್ಥಪೂರ್ಣವಾಗಿದ್ದು ವಿದ್ಯಾರ್ಥಿಗಳ ಸಾಧನೆ ಹಾಗೂ ಸಂಸ್ಥೆಯ ಅಭಿವೃದ್ದಿ ಯಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ. ಶಿಕ್ಷಕರು ಸಂಸ್ಥೆಯ ಆಧಾರವಾಗಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮತ್ತಷ್ಟು ಸಾಧನೆಯನ್ನು ಮಾಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಜ್ಯೋತಿ ಮಾತನಾಡಿ, ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಿದ ಶಿಕ್ಷಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ವೇದಿಕೆಯಲ್ಲಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕರಾದ ಹೆಚ್.ಆರ್. ಜಗದೀಶ್, ನಿವೃತ್ತ ಉಪನಿರ್ದೇಶಕ ದುರ್ಗಯ್ಯ ಚಿತ್ರದುರ್ಗ, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಸಿದ್ದೇಶ್ವರ, ಕುಮಾರ್ ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರನ್ನು ಒಳಗೊಂಡಂತೆ 15 ಜನ ಉಪನ್ಯಾಸಕರು, 8 ಶಿಕ್ಷಕರು ಹಾಗೂ ಅತೀ ಹೆಚ್ಚು ಅಂಕಗಳನ್ನು ಪಡೆದ 15 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.