ಮಡಿಕೇರಿ ಸೆ.24 NEWS DESK : ಕೊಡಗು ಜಿಲ್ಲಾ ಛಾಯಾಚಿತ್ರ ಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.28 ರಂದು ಕುಶಾಲನಗರದಲ್ಲಿ “ಛಾಯ ಕುಟುಂಬ ಸಮ್ಮಿಲನ” ಮತ್ತು ಸೋನಿ ಕ್ಯಾಮರ ಕುರಿತು ಕಾರ್ಯಾಗಾರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಆವರ್ತಿ ಆರ್.ಮಹದೇವಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9 ಗಂಟೆಗೆ ಕುಶಾಲನಗರದ ಗಣಪತಿ ದೇವಾಲಯದಿಂದ ರೈತ ಸಹಕಾರ ಭವನದವರೆಗೆ ಚಂಡೆ ವಾದ್ಯ, ಜಾನಪದ ಕಲಾತಂಡಗಳೊಂದಿಗೆ, ಗಣ್ಯರ ಮತ್ತು ಛಾಯಾಗ್ರಾಹಕರ ಬೃಹತ್ ಮೆರವಣಿಗೆ ನಡೆಯಲಿದ್ದು, 9.30 ಗಂಟೆಗೆ ಸಭಾ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದರು. ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಕಾರ್ಯಾಗಾರವನ್ನು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಉದ್ಘಾಟಿಸಲಿದ್ದಾರೆ. ಛಾಯಾಚಿತ್ರ ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕುಶಾಲನಗರ ತಾಲ್ಲೂಕು ಅಧ್ಯಕ್ಷ ವಿ.ಪಿ.ಶಶಿಧರ್ ಚಾಲನೆ ನೀಡಲಿದ್ದು, ಅಧ್ಯಕ್ಷತೆಯನ್ನು ತಾನು ವಹಿಸಲಿರುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕುಶಾಲನಗರ ದೇವಾಲಯಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್, ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣ ಕುಮಾರ್, ಬಿಜೆಪಿ ಮಂಡಲ ಕಾರ್ಯಾಧ್ಯಕ್ಷ ವಿ.ಎನ್. ಉಮಾಶಂಕರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಛಾಯಾ ಸಾಧಕ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಕೆ.ಪಿ.ನಾಗೇಂದ್ರ ಅವರನ್ನು ಅಭಿನಂದಿಸಲಾಗುವುದು ಎಂದು ತಿಳಿಸಿದರು. ಮಧ್ಯಾಹ್ನ 2 ಗಂಟೆಗೆ ಛಾಯಾ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದ್ದು, ಪಶು ಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ್ ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭಾಗವಹಿಸಲಿದ್ದು, ಖ್ಯಾತ ವಾಗ್ಮಿ ಮತ್ತು ಕನ್ನಡ ವಿದ್ವಾಂಸರು ಪ್ರೊ.ಎಂ.ಕೃಷ್ಣೇಗೌಡ ಪ್ರಧಾನ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭ ಖ್ಯಾತ ರಂಗಭೂಮಿ ಕಲಾವಿದ, ಚಲನಚಿತ್ರ ನಟ ಶೀನುಮಿತ್ರ ಅವರನ್ನು ಸನ್ಮಾನಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕೊಡಗು ಮಾತ್ರವಲ್ಲದೆ ಹಾಸನ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಿಂದಲೂ ಛಾಯಾಗ್ರಾಹಕರು ಪಾಲ್ಗೊಳ್ಳಲಿದ್ದಾರೆ ಎಂದ ಅವರು, ಸಭಾ ಕಾರ್ಯಕ್ರಮದ ನಂತರ ಛಾಯಾಚಿತ್ರಗ್ರಾಹಕರ ಕುಟುಂಬಸ್ಥರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಅಲ್ಲದೇ ಗುಡ್ಡೇಮನೆ ವಿಶ್ವಕುಮಾರ್ ಅವರಿಂದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ರೋಶನ್, ಪ್ರಧಾನ ಕಾರ್ಯದರ್ಶಿ ಬಿ.ವೈ.ಲವಕುಮಾರ್, ನಿರ್ದೇಶಕ ಡೇವಿಡ್ ಸೊಲೋಮನ್ ಉಪಸ್ಥಿತರಿದ್ದರು.