ಮಡಿಕೇರಿ NEWS DESK ಸೆ.24 : ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜೀನಾಮೆಗಾಗಿ ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು ಮತ್ತು ನಿಷ್ಪಕ್ಷಪಾತ ತನಿಖೆಗೆ ಸಹಕರಿಸಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸುವ ಮೂಲಕ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ. ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಕೋರ್ಟ್ ಸಾಬೀತು ಪಡಿಸಿದೆ. ವಿನಾಕಾರಣ ರಾಜ್ಯಪಾಲರ ವಿರುದ್ಧ ಆರೋಪವನ್ನು ಮಾಡಿ ಅಧಿಕಾರದಲ್ಲಿ ಮಂದುವರಿಯುವುದನ್ನು ಬಿಟ್ಟು ತನಿಖೆಯನ್ನು ಎದುರಿಸಲಿ, ನ್ಯಾಯಾಲಯದ ಆದೇಶವನ್ನು ಗೌರವಿಸಲಿ ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಗರಣಗಳ ಸರಮಾಲೆಯೇ ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರುಪಯೋಗ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸುತಿದ್ದು, ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಾ ಬಂದಿದೆ. ಆದರೆ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಅಂಟ್ಟಿಕೊಂಡೇ ಇದ್ದು, ನ್ಯಾಯಾಲಯದ ಆದೇಶಕ್ಕಾದರು ಗೌರವ ನೀಡಿ ಅಧಿಕಾರ ತ್ಯಜಿಸಲಿ ಎಂದು ರವಿ ಕಾಳಪ್ಪ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಉಪಾಧ್ಯಕ್ಷ ಬಿ.ಕೆ.ಜಗದೀಶ್, ಪ್ರಮುಖರಾದ ಕವನ್ ಕಾವೇರಪ್ಪ, ಡೀನ್ ಬೋಪಣ್ಣ, ಸತೀಶ್ ಪೈ, ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.