ಮಡಿಕೇರಿ ಸೆ.25 NEWS DESK : ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ವಿರೋಧಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೆ.30 ರಂದು ಶ್ರೀಮಂಗಲ, ಅ.5 ರಂದು ತಿತಿಮತಿ ಮತ್ತು ಅ.9 ರಂದು ಅಮ್ಮತ್ತಿಯಲ್ಲಿ ಶಾಂತಿಯುತ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶ್ರೀಮಂಗಲದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್‍ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‍ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.