ಮಡಿಕೇರಿ ಸೆ.25 NEWS DESK : ಜಿಲ್ಲೆಯಲ್ಲಿನ ಪೌರಕಾರ್ಮಿಕರ ವಸತಿ ಗೃಹಗಳು ಶಿಥಿಲಗೊಂಡಿರುವ ಬಗ್ಗೆ ಪರಿಶೀಲಿಸಿ, ವಸತಿ ಗೃಹ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಂಬಂಧ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ ಕಡೆಗಳಲ್ಲಿ ಪೌರಕಾರ್ಮಿಕರ ವಸತಿ ಗೃಹ ಕಟ್ಟಡ ಶೀತಲಗೊಂಡಿರುವ ಮಾಹಿತಿ ಪಡೆದು ವರದಿ ನೀಡಬೇಕು. ಜೊತೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಸರ್ಕಾರಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಡಿಕೇರಿ ನಗರಸಭೆ, ವಿರಾಜಪೇಟೆ ಮತ್ತು ಕುಶಾಲನಗರ ಪುರಸಭೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿದಂತೆ ಪೌರಕಾರ್ಮಿಕರು ವಾಸಿಸುವ ವಸತಿ ಗೃಹಗಳು ಹಳೇ ಕಟ್ಟಡಗಳಾಗಿದ್ದು, ಶೀತಲಗೊಂಡಿವೆ. ಆದ್ದರಿಂದ ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಮನವಿ ಮಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂಗಳಲ್ಲಿ ಪೌರಕಾರ್ಮಿಕ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕುಟುಂಬಗಳಿಗೆ ವಸತಿ ಒದಗಿಸುವಂತಾಗಬೇಕು ಎಂದು ಕೋರಿದರು. ಸಮಿತಿ ನಾಮನಿರ್ದೇಶಿತ ಸದಸ್ಯರಾದ ಮುತ್ತಪ್ಪ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದಲ್ಲಿ ನಿವೇಶನ ರಹಿತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇವರಿಗೆ 94 ಸಿ, ರಡಿ ನಿವೇಶನ ಹಕ್ಕುಪತ್ರ ಒದಗಿಸುವಂತಾಗಬೇಕು. ಕೆಲವು ಪರಿಶಿಷ್ಟ ಕುಟುಂಬಗಳು ಆರ್‍ಟಿಸಿ ಇಲ್ಲದೆ ಸೌಲಭ್ಯ ಪಡೆಯಲು ಪರದಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಪ್ರವೀಣ್ ಕುಮಾರ್ ಜನವರಿ, 01, 2005 ರ ಹಿಂದೆ ವಾಸಿಸುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಇದ್ದು, ಕಂದಾಯ ಪಾವತಿ ಬಗ್ಗೆ ಖಾತರಿಪಡಿಸಿಕೊಂಡು ಹಕ್ಕುಪತ್ರ ಪಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಬಳಿಕ ಮಾತನಾಡಿದ ಮುತ್ತಪ್ಪ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯುವಜನರು ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಪೂರ್ಣಗೊಳಿಸಿ ಸಾಕಷ್ಟು ಉದ್ಯೋಗಾಕಾಂಕ್ಷಿಗಳು ಇದ್ದಾರೆ. ಇವರಿಗೆ ವೃತ್ತಿ ತರಬೇತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಯುವನಿಧಿ ಯೋಜನೆಯಡಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವ್ಯಾಸಂಗ ಮಾಡಿರುವವರಿಗೆ ಯುವನಿಧಿ ಸೌಲಭ್ಯವಿದ್ದು, ಇದನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಮತ್ತೊಬ್ಬ ಸದಸ್ಯರಾದ ಪಿ.ಪಿ.ಸುಕುಮಾರ್ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ರಸ್ತೆ ಸುದಾರಿಸಬೇಕು. ಆ ನಿಟ್ಟಿನಲ್ಲಿ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ನಡವಳಿ ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ರಮೇಶ್, ಪುರಸಭೆ ಮುಖ್ಯಾಧಿಕಾರಿ ಚಂದ್ರಕಾಂತ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ತಹಶೀಲ್ದಾರರಾದ ರಾಮಚಂದ್ರ, ಮೋಹನ್ ಕುಮಾರ್, ತಾ.ಪಂ.ಇಒ ಅಪ್ಪಣ್ಣ, ಸಹಾಯಕ ನಿರ್ದೇಶಕರಾದ ಪಿ.ವಿ.ಶ್ರೀನಿವಾಸ್, ಸಮಿತಿ ಸದಸ್ಯರಾದ ದಿಲೀಪ್ ಕುಮಾರ್, ಜೇನುಕುರುಬರ ಕೆಂಪ, ಇತರರು ಇದ್ದರು.