ಸುಂಟಿಕೊಪ್ಪ ಸೆ.26 NEWS DESK : ಆಯುಷ್ಮಾನ್ ಯೋಜನೆಯಡಿಯಲ್ಲಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ಮೇಳ ನಡೆಯಿತು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‍ಕುಮಾರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ವರ್ಷವನ್ನು ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸೂಚಿಸಿದೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯು ಸುಸ್ಥಿರ ಆರೋಗ್ಯವನ್ನು ಹೊಂದುವಂತಾಗಬೇಕು ಎಂದರು. ‘ಆಯುಷ್ಮಾನ್’ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ವಾರ್ಡ್‍ಗಳಲ್ಲಿ ನಡೆಸಲಾಗುತ್ತಿದೆ. ಶಿಬಿರದಲ್ಲಿ ನುರಿತ ವೈದ್ಯರು ಹಾಗೂ ಸಿಬ್ಬಂದಿಗಳು ಆಗಮಿಸುತ್ತಿದ್ದು, ಎಲ್ಲಾ ತರಹದ ಕಾಯಿಲೆಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತದೆ. ಪ್ರತಿಯೋರ್ವ ವ್ಯಕ್ತಿಯು ಉಚಿತ ತಪಾಸಣೆ ನಡೆಸಿಕೊಂಡು ಸಂಬಂಧಿಸಿದ ನುರಿತ ವೈದ್ಯರಿಂದ ಸ್ಥಳದಲ್ಲೇ ಚಿಕಿತ್ಸೆ ಪಡೆಯುವಂತಾಗಲಿ ಎಂದರು. ಜಿಲ್ಲಾ ಶಸ್ತ್ರ ಚಿಕಿತ್ಸೆಯ ವೈದ್ಯರಾದ ನಂಜುಡಯ್ಯ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಚೇತನ್, ಮಡಿಕೇರಿ ಜಿಲ್ಲಾ ಸರ್ವೆಶಿಕ್ಷಣ ಘಟಕದ ಡಾ.ಶ್ರೀನಿವಾಸ್, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ವೈದ್ಯದಾಧಿಕಾರಿ ಓಂಪ್ರಿಯ ಶಿಬಿರದ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ವೈದ್ಯದಾಧಿಕಾರಿಗಳು, ಜಿಲ್ಲಾ ವೈದ್ಯರು, ಗ್ರಾಮ ಪಂಚಾಯಿತಿ ಸದಸ್ಯರಾದ ಶಬ್ಬೀರ್, ರಫೀಕ್‍ಖಾನ್, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಮತ್ತಿತರರು ಹಾಜರಿದ್ದರು. ಇದೇ ಸಂದರ್ಭ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳಾದ ಆಂಬ್ಯುಲೆನ್ಸ್ ವಾಹನ, ಇಸಿಜಿ ನಡೆಸದಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರು.